

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಪ್ರದೇಶಗಳನ್ನು 'ಕಿತ್ತೂರು ಕರ್ನಾಟಕ' ಘೋಷಣೆ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಎರಡು ದಿನ ನಡೆಯುವ ಕಿತ್ತೂರು ಉತ್ಸವದಲ್ಲಿ ಭಾಗವಹಿಸುತ್ತೇನೆ. ಬೆಳಗಾವಿಯಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆಗೆ ಕನ್ನಡ ಸಂಘಟನೆಗಳು ಒತ್ತಾಯಿಸುತ್ತಿರುವ ಕುರಿತು ಚರ್ಚೆ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಉಪಚುನಾವಣೆಯ ಕ್ಷೇತ್ರವಾದ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿ ಬಂದಿದ್ದೇನೆ. ಇಂದು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿದ ಬಳಿಕ ಮತ್ತೆ ಹಾವೇರಿ ಜಿಲ್ಲೆಯ ಹಾನಗಲ್ ಮತಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಪ್ರಚಾರ ಕಾರ್ಯ ನಡೆಸಲಿದ್ದೇನೆ. ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪಷ್ಟ ಬಹುಮತದಿಂದ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.