

ಮೈಸೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮಂಗಳವಾರ ಸಿಸಿಬಿ ಪೊಲೀಸರು ಬಂಧಿಸಿ 4.90 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.
ಲಷ್ಕರ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯ ಬಳಿಯೊಂದರಲ್ಲಿ ರಾಜಸ್ತಾನ ಮೂಲದ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ವಿಶಾಖಪಟ್ಟಣದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.
ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಎಸ್. ಜಾಹ್ನವಿ, ಸಿಸಿಬಿ ಘಟಕದ ಎಸಿಪಿ ಎಸ್.ಎನ್. ಸಂದೇಶ್ ಕುಮಾರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ಎ. ಮಲ್ಲೇಶ್, ಎಸ್‌ಐ ರಾಜು ಕೋನಕೇರಿ, ಎಎಸ್‌ಐ ರಾಜು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25.17 ಲಕ್ಷ ರೂ. ದಂಡ ವಸೂಲಾತಿ: ಟ್ರಾಫಿಕ್ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಶೇ.50 ರಿಯಾಯಿತಿ ನೀಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಜು.17ರವರೆಗೆ (11 ದಿನಗಳು) 25.17 ಲಕ್ಷ ರೂ. ದಂಡ ಸಂಗ್ರಹವಾಗಿದೆ. ಜು.6 ರಿಂದ ಜು.17ರವರೆಗೆ 9819 ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 25,17,450 ರೂ.ಸಂಗ್ರಹವಾಗಿದೆ ಎಂದು ಸಂಚಾರ ವಿಭಾಗದ ಎಸಿಪಿ ಪರುಶುರಾಮಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.