ತಗಡೂರಿನಲ್ಲಿ ಸಾಮೂಹಿಕ ಸತ್ಯನಾರಾಯಣಸ್ವಾಮಿ ಪೂಜೆ

02 CRP 03 (1)
Published on

ಚನ್ನರಾಯಪಟ್ಟಣ: ಸಾಲ ಸೌಲಭ್ಯದ ಜತೆಗೆ ವಿವಿಧ ಕರಕುಶಲ ತರಬೇತಿ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರ ಬದುಕಿಗೆ ನೆರವಾಗಿರುವ ಹೆಗ್ಗಳಿಕೆ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಗೆ ಸಲ್ಲುತ್ತದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ತಾಲೂಕಿನ ತಗಡೂರು ಗ್ರಾಮದ ಶ್ರೀದೇವಮ್ಮ ದೇಗುಲದ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣಸ್ವಾಮಿ ಪೂಜೆಯ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಂಸ್ಥೆಯಿಂದ ಹೈನುಗಾರಿಕೆ ಸೇರಿದಂತೆ ಹಲವು ಯೋಜನೆಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ 25 ಕೋಟಿ. ರೂ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ ಪುರಾತನ ದೇಗುಲಗಳನ್ನು ಜೀರ್ಣೋದ್ಧಾರಗೊಳಿಸುವ ಮೂಲಕ ಧಾರ್ಮಿಕ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಡಿ.ಜಯರಾಮ್ ಕಾರ್ಯಕ್ರಮ ಉದ್ಘಾಟಿಸಿದರು. ತಗಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಕುಮಾರ್, ಪಿಡಿಒ ಮಂಜುನಾಥ್, ಪಿಎಸಿಸಿಎಸ್ ಅಧ್ಯಕ್ಷ ಎನ್.ಬಸವರಾಜು, ಯೋಜನೆಯ ಒಕ್ಕೂಟದ ಅಧ್ಯಕ್ಷ ಜಗದೀಶ್, ಬಾಗೂರು ವಲಯದ ಮೇಲ್ವಿಚಾರಕ ಉದಯ್ ಟಿ.ದೇವಾಡಿಗ, ಸಂಸ್ಥೆಯ ಕೃಷಿ ಅಧಿಕಾರಿ ಕರುಣಾಕರ್, ತಾಲೂಕು ಯೋಜನಾಧಿಕಾರಿ ಸುನೀತಾನಾಯಕ್, ಸೇವಾ ಪ್ರತಿನಿಧಿ ತಗಡೂರು ನಾಗೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net