

ಶಿಡ್ಲಘಟ್ಟ: ವಕ್ಫ್ ಬೋರ್ಡ್ ಮೂಲಕ ರೈತರ ಜಮೀನನ್ನು ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರವೇ ಪರೋಕ್ಷವಾಗಿ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ, ಕೂಡಲೇ ವಕ್ಫ್ ಬೋರ್ಡ್‌ನಿಂದ ರೈತರಿಗೆ ನೀಡಿರುವ ನೋಟಿಸ್‌ಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು.
ತಾಲೂಕಿನ ಕೊತ್ತನೂರು ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಹಾಗೂ ಹೆಚ್ಚು ಸದಸ್ಯತ್ವ ನೋಂದಾಯಿಸಿದ ಕಾರ್ಯಕರ್ತರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಸಾವಿರಾರು ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ. ಜಮೀನುಗಳನ್ನು ಬಿಟ್ಟುಕೊಡುವಂತೆ 45 ದಿನಗಳ ಗಡುವು ನೀಡಲಾಗಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಯೋಜನೆ ಎಂದು ಆರೋಪಿಸಿದರು. ದೇಶದ ಶಕ್ತಿ ಕೇಂದ್ರ ಸಂಸತ್ ಭವನ ಸೇರಿ ಮೆಟ್ರೋ ನಿಲ್ದಾಣ, ವಿಮಾನ
ನಿಲ್ದಾಣಗಳಿರುವ ಜಮೀನುಗಳು ವಕ್ಫ್ ಬೋರ್ಡ್‌ಗೆ ಸೇರಿದೆ ಎಂದರೆ ಏನರ್ಥ? ಇದರ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದರು.
ಕೂಡಲೇ ಸರ್ಕಾರ ಈ ಬಗ್ಗೆ ತನಿಖೆ ನಡೆಸಬೇಕು. ವಿನಾಕಾರಣ ನೋಟಿಸ್ ಕೊಟ್ಟವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ರೈತರಿಗೆ ಧೈರ್ಯ ತುಂಬುವ ಕೆಲಸ ಆಗಬೇಕು. ಇಲ್ಲವಾದಲ್ಲಿ ಬಿಜೆಪಿಯಿಂದ ಇಡೀ ರಾಜ್ಯದ ಉದ್ದಕ್ಕೂ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
1200 ಸದಸ್ಯರನ್ನು ನೋಂದಾಯಿಸಿದ ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ಸೋಮಶೇಖರ್ ಸೇರಿ ಅಧಿಕ ಸದಸ್ಯರನ್ನು ನೋಂದಾಯಿಸಿದವರನ್ನು ಸನ್ಮಾನಿಸಲಾಯಿತು.
ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ಮಾಜಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಕೊತ್ತನೂರು ಜಗದೀಶ್, ರವಿ, ಮಧು, ರಾಮಕೃಷ್ಣಪ್ಪ, ಪುರುಷೋತ್ತಮ್ ಮತ್ತಿತರರು ಹಾಜರಿದ್ದರು.
ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅತಿಹೆಚ್ಚು ಸದಸ್ಯರನ್ನು ನೋಂದಾಯಿಸಿದ ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ಸೋಮಶೇಖರ್ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ, ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ಮಾಜಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ಮತ್ತಿತರರು ಇದ್ದರು.