ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು

jail
Published on

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ, 12,500 ರೂ. ದಂಡ ವಿಧಿಸಿ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅಪರಾಧಿ ಸೈಯದ್ ಖಾಜಾ(28) ಶಿಕ್ಷೆಗೆ ಗುರಿಯಾದವ. 2018ರ ಡಿ.24ರಂದು 17 ವರ್ಷದ ಬಾಲಕಿಯನ್ನು ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪಾಲಕರು, ಮಗಳು ಕಾಣೆಯಾಗಿರುವ ಕುರಿತು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ನಂದಿನಿ ಲೇಔಟ್ ಪೊಲೀಸರು, ಸೈಯದ್ ಖಾಜಾನನ್ನು ಬಂಧಿಸಿ ಬಾಲಕಿಯನ್ನು ರಕ್ಷಣೆ ಮಾಡಿ ಪಾಲಕರಿಗೆ ಒಪ್ಪಿಸಿದ್ದರು. ತನಿಖೆ ನಡೆಸಿ ಸೈಯದ್ ಖಾಜಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ ವಾದ- ಪ್ರತಿವಾದ ಆಲಿಸಿ ಸೈಯದ್ ಖಾಜಾ ಅಪರಾಧಿ ಎಂದು ಘೋಷಣೆ ಮಾಡಿ ಶಿಕ್ಷೆ ಪ್ರಕಟಿಸಿದೆ. ಸರ್ಕಾರಿ ಅಭಿಯೋಜಕ ಕೆ.ವಿ.ಅಶ್ವಥನಾರಾಯಣ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net