

ಮೈಸೂರು: ರಾಜ್ಯ ಸರ್ಕಾರ ಕಬ್ಬಿಗೆ ಹೆಚ್ಚಿನ ದರ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಗುರು ವಾರ ನಗರದ ಎಪಿಎಂಸಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರಸ್ತೆ ತಡೆ ಚಳವಳಿ ಹಿನ್ನೆಲೆಯಲ್ಲಿ ಮೈಸೂರು-ಊಟಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ಈ ಸಂದರ್ಭ ರೈತರು ಉರುಳುಸೇವೆ ಹಾಗೂ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಪಂಜಾಬ್‌ನಲ್ಲಿ ಟನ್ ಕಬ್ಬಿಗೆ 3800 ರೂ., ಉತ್ತರ ಪ್ರದೇಶದಲ್ಲಿ 3500 ರೂ., ಗುಜರಾತ್‌ನಲ್ಲಿ 4400 ರೂ. ದರ ನಿಗದಿ ಮಾಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಕನಿಷ್ಠ ಟನ್ ಕಬ್ಬಿಗೆ 3,500 ರೂ.ನಿಗದಿ ಮಾಡಬೇಕು. ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ ಕಾರ್ಖಾನೆಯವರು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ. 16 ತಿಂಗಳು ಕಳೆದರೂ ಕಬ್ಬು ಕಟಾವು ಆಗುತ್ತಿಲ್ಲ. ವಿಳಂಬದ ಅವಧಿಗೆ ಬಡ್ಡಿ ಸೇರಿಸಿ ಹೆಚ್ಚುವರಿ ದರ ನೀಡಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಪರವಾಗಿ ಆಗಮಿಸಿದ ಆಹಾರ ಇಲಾಖೆ ಉಪ ನಿರ್ದೇಶಕಿ ರಮಣಿ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಪಿ. ಸೋಮಶೇಖರ್, ಬರಡನಪುರ ನಾಗರಾಜ್, ಕುರುಬೂರು ಸಿದ್ದೇಶ್, ವೆಂಕಟೇಶ್, ಹಾಡ್ಯ ರವಿ, ಕಿರಗಸೂರು ಶಂಕರ್ ಹಾಗೂ ಇತರರು ಪಾಲ್ಗೊಂಡಿದ್ದರು.