PSI ನೇಮಕಾತಿಗೆ ಮರುಪರೀಕ್ಷೆ: ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

PSi
Published on

ಬೆಂಗಳೂರು: ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ವಜಾಗೊಳಿಸಿದೆ.

ಕಳಂಕಿತ ಹಾಗೂ ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಈಗಾಗಲೇ ಹೊರಡಿಸಿರುವ ಅಧಿಸೂಚನೆ ಅನುಸಾರವೇ ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಲ್.ಎನ್. ಪವಿತ್ರಾ ಸೇರಿ 28 ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದರು.

ಅರ್ಜಿ ಕುರಿತು ಸರ್ಕಾರ ಹಾಗೂ ಅಭ್ಯರ್ಥಿಗಳ ಪರ ವಕೀಲರ ವಾದ-ಪ್ರತಿವಾದ ಆಲಿಸಿ, ಕಾಯ್ದಿರಿಸಿದ್ದ ಆದೇಶವನ್ನು ಮಂಗಳವಾರ ಪ್ರಕಟಿಸಿರುವ ಕೆಎಟಿಯ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ನೇತೃತ್ವದ ಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್. ಸುಬ್ರಹ್ಮಣ್ಯ, ದೊಡ್ಡ ಮಟ್ಟದಲ್ಲಿ ಹಗರಣ ನಡೆದಿದೆ. ಜತೆಗೆ, ನೇಮಕಾತಿ ಪ್ರಾಧಿಕಾರದ ಮೇಲೆಯೇ ಆರೋಪಗಳಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆಗೆ ಆದೇಶಿಸಲಾಗಿದೆ ಎಂದು ವಿವರಿಸಿದ್ದರು. ಸರ್ಕಾರದ ವಾದ ಮಾನ್ಯ ಮಾಡಿರುವ ಕೆಎಟಿ ಅರ್ಜಿ ವಜಾಗೊಳಿಸಿದೆ.

ಅರ್ಜಿದಾರರ ಮನವಿ ಏನಾಗಿತ್ತು?: ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಏ.29ರಂದು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಜತೆಗೆ, ಅಂತಿಮ ಪಟ್ಟಿಯು ಈ ಅರ್ಜಿ ಸಂಬಂಧ ಕೆಎಟಿ ಕೈಗೊಳ್ಳುವ ನಿರ್ಧಾರಕ್ಕೆ ಒಳಪಟ್ಟಿರುವಂತೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net