

ಮದ್ದೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡುವುದರಿಂದ ಸಮಾಜದಲ್ಲಿ ಉತ್ತಮ ಸ್ಥಾನಗಳಿಸಿ ಗೌರವಯುತ ಜೀವನ ನಡೆಸಬಹುದೆಂದು ಗಾಂಧಿ ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ.ಎಂ. ರಘು ತಿಳಿಸಿದರು.
ತಾಲೂಕಿನ ಕೊಪ್ಪ ಹೋಬಳಿ ಬೆಕ್ಕಳಲೆ ಗ್ರಾಮದ ಗಾಂಧಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶನಿವಾರ ಮಂಡ್ಯದ ಕೃಷಿಕ ಅಲಯನ್ಸ್ ಸಂಸ್ಥೆ ವತಿಯಿಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಗ್ರಂಥಾಲಯಕ್ಕೆ 25 ಸಾವಿರ ರೂ. ಮೌಲ್ಯದ
ಪುಸ್ತಕಗಳನ್ನು ವಿತರಿಸುವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಪಂಚದಲ್ಲಿ ವಿದ್ಯೆಗಿರುವ ಮಹತ್ವ ಬೇರೆ ಯಾವುದಕ್ಕೂ ಇಲ್ಲ ಎಂಬುವುದುನ್ನು ತಿಳಿದುಕೊಂಡು ಚೆನ್ನಾಗಿ ಓದಿ ಅತ್ಯುನ್ನತ ಸ್ಥಾನದಲ್ಲಿ ತೇರ್ಗಡೆಗೊಂಡು ಪಾಲಕರಿಗೆ ಹಾಗೂ ಶಿಕ್ಷಕರಿಗೆ ಗೌರವ ತರಬೇಕೆಂದು ಹೇಳಿದರು.
ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೈಬ್ರರಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆ ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು, ಶಾಲಾ ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ತಜ್ಞರಿಂದ ಕೌನ್ಸೆಲಿಂಗ್ ಕಾರ್ಯಕ್ರಮವನ್ನು ತಿಂಗಳಿಗೆ ಒಂದು ಬಾರಿಯಾದರೂ ಏರ್ಪಡಿಸಬೇಕು. ಈಗಾಗಲೇ ಸಾಕಷ್ಟು ದೇಶಗಳಲ್ಲಿ ಲೈಂಗಿಕ ಶಿಕ್ಷಣವನ್ನು ಪಠ್ಯದಲ್ಲಿ ಅಳವಡಿಸಲಾಗಿದೆ. ನಮ್ಮ ದೇಶದಲ್ಲಿ ಲೈಂಗಿಕ ಶಿಕ್ಷಣವನ್ನು ಅಳವಡಿಸಬೇಕೇ, ಬೇಡವೇ ಎಂದು ಹಲವು ವರ್ಷಗಳಿಂದ ಚರ್ಚೆಗಳು ನಡೆದೇ ಇವೆ. ಹಾಗಾಗಿ ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜು ಹಂತದಲ್ಲಿಯೇ ಲೈಂಗಿಕ ಶಿಕ್ಷಣವನ್ನು ಪಠ್ಯದಲ್ಲಿ ಅಳವಡಿಸಬೇಕೆಂದು ತಿಳಿಸಿದರು.
ವಿದ್ಯಾರ್ಥಿಗಳು ಶಾಲಾ-ಕಾಲೇಜು ಹಂತದಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಕೊಡಬೇಕು. ಸತತ ಅಭ್ಯಾಸ, ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಏನನ್ನು ಬೇಕಾದರೂ ಸಾಧಿಸಬಹುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪುಸ್ತಕವನ್ನು ಕೊಡುಗೆಯಾಗಿ ನೀಡಲಾಯಿತು.
ಪ್ರಾಂಶುಪಾಲ ಕೆ.ಶಿವರಾಜು, ಎರಡನೇ ಜಿಲ್ಲಾ ಉಪ ಪ್ರಾಂತಪಾಲ ಕೆ.ಎಸ್.ಚಂದ್ರಶೇಖರ್, ಕೃಷಿಕ ಅಲಯನ್ಸ್ ಸಂಸ್ಥೆ ನಿರ್ದೇಶಕರಾದ ಎಸ್.ರಮೇಶ್, ಜಿ.ಧನಂಜಯ, ಎಸ್.ಎನ್. ಕೃಷ್ಣಪ್ಪ, ಉಪನ್ಯಾಸಕರಾದ ಡಾ.ಕೃಷ್ಣಪ್ಪ, ಸತೀಶ್ ಇತರರು ಇದ್ದರು.