ಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ಅಗತ್ಯ ಸಿದ್ಧತೆಗೆ ಎ.ಎಸ್.ಪೊನ್ನಣ್ಣ ಸೂಚನೆ

MDK10
Published on

ಮಡಿಕೇರಿ: ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ಸಂಭ್ರಮ, ಸಡಗರದಿಂದ ರಾಜ್ಯದಲ್ಲಿ ಮಾದರಿಯಾಗಿ ಆಚರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೂಚಿಸಿದರು.


ಭಾಗಮಂಡಲ ಭಗಂಡೇಶ್ವರ ದೇವಾಲಯ ಬಳಿಯ ಮುಡಿ ಕಟ್ಟಡದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಸಂಬಂಧ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರಾ ಮಹೋತ್ಸವ ಕೊಡಗು ಜಿಲ್ಲೆಯಲ್ಲಿ ವಿಶಿಷ್ಟವಾದ ಹಬ್ಬವಾಗಿದೆ. ಆ ನಿಟ್ಟಿನಲ್ಲಿ ಉತ್ಸವವಾಗಿ ನಡೆಸುವಂತಾಗಬೇಕು. ತಲಕಾವೇರಿ ಜಾತ್ರಾ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಪೊಲೀಸ್, ಸಾರಿಗೆ, ಅರಣ್ಯ, ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕರು ನಿರ್ದೇಶನ ನೀಡಿದರು.


ಮಡಿಕೇರಿಯಿಂದ ತಲಕಾವೇರಿಯವರೆಗೆ, ನಾಪೋಕ್ಲುವಿನಿಂದ ಭಾಗಮಂಡಲ ಹಾಗೆಯೇ ಭಾಗಮಂಡಲ-ಕರಿಕೆ ರಸ್ತೆ ಸರಿಪಡಿಸಬೇಕು. ಗಿಡಗಂಟೆಗಳನ್ನು ಕಡಿಯಬೇಕು. ಜತೆಗೆ ರಸ್ತೆ ಬದಿ ಬೆಳೆದಿರುವ ಮರದ ಕೊಂಬೆಗಳನ್ನು ಕಡಿಯುವಂತಾಗಬೇಕು. ಈ ಬಾರಿ ಪವಿತ್ರ ತೀರ್ಥೋದ್ಭವ ಮಧ್ಯರಾತ್ರಿ ಸಂಭವಿಸುವುದರಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮವಹಿಸಬೇಕು. ವಿದ್ಯುತ್ ಮಾರ್ಗಗಳನ್ನು ಸರಿಪಡಿಸಬೇಕು. ಅಗತ್ಯ ಲೈಟಿಂಗ್ ವ್ಯವಸ್ಥೆಗೆ ಕ್ರಮವಹಿಸಬೇಕು ಎಂದು ಶಾಸಕರು ಹೇಳಿದರು.


ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು ಪೂರೈಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಜತೆಗೆ ಅಗತ್ಯ ಶೌಚಾಲಯ ವ್ಯವಸ್ಥೆ ಮಾಡಬೇಕು. ಹಾಗೆಯೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಜ್ಞ ವೈದ್ಯರನ್ನು ನಿಯೋಜಿಸುವುದು, ಆಂಬ್ಯುಲೆನ್ಸ್ ಸೇವೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಬೇಕು. ಭಕ್ತಾದಿಗಳಿಗೆ ಕಿರಿಕಿರಿ ಉಂಟಾಗದಂತೆ ಗಮನಹರಿಸಬೇಕು. ಹಾಗೆಯೇ ಹೆಚ್ಚುವರಿ ಬಸ್ ಸೇವೆಯನ್ನು ಕಲ್ಪಿಸಬೇಕು. ಜಾತ್ರಾ ಮಹೋತ್ಸವದಂದು ಭಾಗಮಂಡಲದಿಂದ ತಲಕಾವೇರಿವರೆಗೆ ಎಲ್ಲರಿಗೂ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡುವಂತೆ ಎ.ಎಸ್.ಪೊನ್ನಣ್ಣ ಹೇಳಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಈ ಬಾರಿ ರಾತ್ರಿ ವೇಳೆ ತೀರ್ಥೋದ್ಭವ ಸಂಭವಿಸುವುದರಿಂದ ಅಗತ್ಯ ಪೊಲೀಸ್ ಬಂದೋ ಬಸ್ತ್ ಮಾಡಲಾಗುವುದು. ತಣ್ಣಿಮಾನಿ-ತಲಕಾವೇರಿ ರಸ್ತೆ ಕಠಿಣವಾಗಿದೆ. ಕೋರಂಗಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಪರಿಶೀಲಿಸಲಾಗುವುದು. ಭಾಗಮಂಡಲ-ತಲಕಾವೇರಿ ರಸ್ತೆ ಬದಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ತಲಕಾವೇರಿಯಲ್ಲಿ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದರು.


ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಮಾತನಾಡಿ, ತೀರ್ಥ ತೆಗೆದುಕೊಂಡು ಹೋಗುವ ವಾಹನಗಳಿಗೆ ಅವಕಾಶ ಮಾಡಬೇಕು. ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಬಾರದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಅನ್ನಸಂತರ್ಪಣೆ ಕಾರ್ಯ ವ್ಯವಸ್ಥಿತವಾಗಿ ಮಾಡಬೇಕು ಎಂದು ಹೇಳಿದರು.


ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಹೆಚ್ಚುವರಿ ಬಸ್‌ಗಳನ್ನು ಕಲ್ಪಿಸಬೇಕು. ಹಾಗೆಯೇ ಹೆಚ್ಚುವರಿ ಚಾಲಕರನ್ನು ನಿಯೋಜಿಸಬೇಕು. ತಜ್ಞ ವೈದ್ಯರನ್ನು ನಿಯೋಜಿಸುವುದರ ಜೊತೆಗೆ ಐಸಿಯು ವ್ಯವಸ್ಥೆ ಕಲ್ಪಿಸುವಂತೆ ಸಲಹೆ ಮಾಡಿದರು.


ಗ್ರಾ.ಪಂ.ಅಧ್ಯಕ್ಷ ಕಾಳನ ರವಿ ಮಾತನಾಡಿ, ಗ್ರಾ.ಪಂ.ವತಿಯಿಂದ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕುಡಿಯುವ ನೀರು ಪೂರೈಕೆಗೆ ಕ್ರಮ, ಚರಂಡಿ ಸರಿಪಡಿಸಲಾಗಿದೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವ ಕೆಲಸಗಳನ್ನು ನಿರ್ವಹಿಸಲಾಗಿದೆ. ಭಾಗಮಂಡಲ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲಿ ವೈದ್ಯರು ವಾಸ್ತವ್ಯ ಹೂಡುವಂತಾಗಬೇಕು. ಜಾತ್ರಾ ಪ್ರಯುಕ್ತ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪೊನ್ನಣ್ಣ ಮಾತನಾಡಿ, ಈ ಬಾರಿ ತಲಕಾವೇರಿ ಜಾತ್ರೆಗೆ ಹೆಚ್ಚಿನ ಹಣ ಬಿಡುಗಡೆಯಾಗಲಿದ್ದು, ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ನಿಯಮಾನುಸಾರ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗ ಮಾಡಲಾಗುತ್ತದೆ ಎಂದು ಹೇಳಿದರು.


ಸಭೆಯಲ್ಲಿ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಗ್ರಾ.ಪಂ.ಉಪಾಧ್ಯಕ್ಷೆ ಗಂಗಮ್ಮ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಭಾಗಮಂಡಲ ದೇವಾಲಯದ ತಕ್ಕ ಮುಖ್ಯಸ್ಥ ಬಲ್ಲಡ್ಕ ಅಪ್ಪಾಜಿ, ತಹಶೀಲ್ದಾರ್ ಪ್ರವೀಣ್ ಕುಮಾರ್, ಡಿವೈಎಸ್‌ಪಿ ಎಂ.ಜಗದೀಶ್, ವಿವಿಧ ಇಲಾಖೆ ಅಧಿಕಾರಿಗಳು, ಭಕ್ತಾಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಮಾಜದ ಮುಖಂಡರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net