

ಕೋಟ: ಕೇಂದ್ರ ಸರ್ಕಾರದ ಬಡವರ ಕಲ್ಯಾಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು ಅದರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಕೂಡ ಒಂದಾಗಿದೆ. ನಗರ ಪಟ್ಟಣ ವ್ಯಾಪ್ತಿಯ ಬಡವರಿಗೆ ಸೂರು ಕಲ್ಪಿಸುವ ಮಹತ್ತರ ಯೋಜನೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಶನಿವಾರ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ)2.0 ಯೋಜನೆಯನ್ನು ಅನುಷ್ಠಾನಗೊಳಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಉಡುಪಿ ನಗರಾಭಿವೃದ್ಧಿ ಕೋಶದ ಆಯುಕ್ತ ಕಾಶಿನಾಥ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲೆಯ ವಿವಿಧ ನಗರ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಭಾಗವಹಿಸಿದ್ದರು.
ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಜೆ.ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಅನುಸೂಯ ಹೇರ್ಳೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮೋಹನ್ ರಾಜ್ ಉಪಸ್ಥಿತರಿದ್ದರು. ಉಡುಪಿ ನಗರಸಭೆ ಪೌರಾಯುಕ್ತರಾದ ಮಹಾಂತೇಶ್ ಹಂಗರಗಿ ಸ್ವಾಗತಿಸಿದರು. ಪ.ಪಂ. ಸಿಬ್ಬಂದಿ ಸುಮಿತಾ ನಿರೂಪಿಸಿದರು. ಸಿಬ್ಬಂದಿ ಚಂದ್ರಶೇಖರ್ ಸೋಮಯಾಜಿ ವಂದಿಸಿದರು.