

ಬೆಂಗಳೂರು: ರಾಜಧಾನಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂರು ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಅಯಾನ್ ಎಂಬ ಮೂರು ವರ್ಷದ ಮಗು ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೂಡ್ಲು ಗೇಟ್ ಬಳಿಯ ಗಾರ್ವೆಬಾವಿ ಪಾಳ್ಯ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಅಯಾನ್, ಮಂಡ್ಯ ಜಿಲ್ಲೆ ಮದ್ದೂರಿನ ಆಯಿಷಾ ಮತ್ತು ನಯೀಂ ಪಾಷಾ ದಂಪತಿಯ ಮಗು. ಆಯಿಷಾ, ಮಗುವನ್ನು ನಗರದ ಸಿಂಗಸಂದ್ರದಲ್ಲಿರುವ ತಮ್ಮ ಅಕ್ಕ ಗವರ್ ಉನ್ನಿಸಾ ಅವರ ಮನೆಯಲ್ಲಿ ಬಿಟ್ಟಿದ್ದರು. ಉನ್ನಿಸಾ ಅವರು, ಬಾಲಕ ಹಾಗೂ ಮಗುವನ್ನು ದ್ವಿಚಕ್ರ ವಾಹನದಲ್ಲಿ ಹಿಂದೆ ಕೂರಿಸಿಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉನ್ನಿಸಾ ಅವರು ಟ್ರಾಫಿಕ್ ಸಿಗ್ನಲ್ನಲ್ಲಿ ದ್ವಿಚಕ್ರ ವಾಹನವನ್ನು ಮುಂದಕ್ಕೆ ಚಾಲನೆ ಮಾಡುತ್ತಿದ್ದಂತೆ ಮಗು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಅದೇ ವೇಳೆಗೆ ಹಿಂದಿನಿಂದ ಬಸ್ ಮಗು ಮೇಲೆ ಹರಿದಿದೆ. ಉನ್ನಿಸಾ ಅವರ ನಿರ್ಲಕ್ಷ್ಯವೇ ದುರ್ಘಟನೆಗೆ ಕಾರಣವೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹುಳಿಮಾವು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಕಂಪನಿ ಉದ್ಯೋಗಿ ಸಾವು
ಮತ್ತೊಂದು ಪ್ರಕರಣದಲ್ಲಿ ಹೊಸೂರು ಮುಖ್ಯರಸ್ತೆಯಲ್ಲಿ ಶನಿವಾರ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ರಮೇಶ್ ನಾಯ್ಕ (೩೫) ಎಂಬುವರು ಸಾವನ್ನಪ್ಪಿದ್ದಾರೆ. ಸರ್ಜಾಪುರ ಬಳಿಯ ಹಾಲನಾಯಕನಹಳ್ಳಿ ನಿವಾಸಿಯಾದ ರಮೇಶ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಲಕಾರಿಯಾಗದೆ ಅವರು ಸಂಜೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸಂದರ್ಭದಲ್ಲಿ ರಮೇಶ್ ನಾಯ್ಕ, ಅರ್ಧ ಹೆಲ್ಮೆಟ್ ಧರಿಸಿದ್ದರು. ಲಾರಿ ಚಾಲಕನನ್ನು ಬಂಧಿಸಿ ವಾಹನ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.