

ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗೆ ಮಠದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರುತ್ತಿವೆ. ಶುಕ್ರವಾರ ಬೆಳಗ್ಗೆ ಬ್ರಾಹ್ಮಿ ಮಹೂರ್ತದಲ್ಲಿ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಗದ್ದುಗೆಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಭಕ್ತರು ಸರದಿಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಶಿವಕುಮಾರ ಶ್ರೀಗಳ ಕಂಚಿನ ಪುತ್ಥಳಿಯನ್ನು ರುದ್ರಾಕ್ಷಿ ಮಂಟಪದಲ್ಲಿಟ್ಟು ಶ್ರೀಮಠದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು. ನಂದಿಧ್ವಜ, ಪೂರ್ಣ ಕುಂಭ ಕಳಸ, ನಾದಸ್ವರಗಳ ಮೂಲಕ ಮೆರವಣಿಗೆಯಲ್ಲಿ ಭಕ್ತರು ಭಾಗಿಯಾಗಿ ಪುನೀತರಾದರು. ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗಿಯಾಗಿದ್ದರು.
ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಮಠದ ಆವರಣದಲ್ಲಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡಲಾಯಿತು. ಮುಸ್ಲಿಂ ಮಗುವಿಗೆ ಶಿವಮಣಿ ಎಂದು ಹೆಸರು ಇಡಲಾಯಿತು.
'ನಡೆದಾಡುವ ದೇವರ ಬಸವ ಭಾರತ' ವೇದಿಕೆ ಕಾರ್ಯಕ್ರಮಕ್ಕೆ ಹಲವು ಗಣ್ಯರು ಆಗಮಿಸಿದ್ದು, ಇನ್ನು ಕೆಲವೇ ಕ್ಷಣದಲ್ಲಿ ಸಿದ್ಧಗಂಗಾ ಮಠಕ್ಕೆ ಅಮಿತ್ ಷಾ ಆಗಮಿಸಲಿದ್ದಾರೆ.