

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಇದು ರಾಜ್ಯ ಸರ್ಕಾರಕ್ಕೆ ಸರಿಯಾದ ಕಪಾಳಮೋಕ್ಷವಾಗಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿವಿಧ ಗಲಭೆ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ವಿರುದ್ಧ ಹಿಂದುಪರ ಸಂಘಟನೆಗಳು ನ್ಯಾಯಾಲಯದಲ್ಲಿ ಐಪಿಎಲ್ ಹಾಕಿದ್ದವು. ನ್ಯಾಯಾಲಯದ ತೀರ್ಪು ಸ್ವಾಗತಾರ್ಹ ಎಂದರು.
ಹೈ ಕೋರ್ಟ್ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಏನಾದರೂ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದರೆ, ಅಲ್ಲಿಯೂ ಸರ್ಕಾರಕ್ಕೆ ಮುಖಭಂಗವಾಗುವುದು ಖಚಿತ ಎಂದು ಹೇಳಿದರು.
ಇನ್ನಾದರೂ ಸರ್ಕಾರ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಕಾನೂನು ಸುವ್ಯವಸ್ಥೆ ಹದಗೆಡಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.