

ಬೆಂಗಳೂರು: ನೂತನ ಪರಿಷತ್ ಸದಸ್ಯರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಪ್ರಮಾಣವಚನ ಬೋಧಿಸಿದರು.
ವಾಯುವ್ಯ ಪದವೀಧರ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿಯ ಹಣಮಂತ ನಿರಾಣಿ ಅವರು ಭಗವಂತನ ಹೆಸರಲ್ಲಿ ಪದಗ್ರಹಣ ಮಾಡಿದರು. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ನ ಮಧು ಜಿ.ಮಾದೇಗೌಡ ಅವರು ತನ್ನ ತಂದೆ ಜಿ.ಮಾದೇಗೌಡರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ವಾಯುವ್ಯ ಶಿಕ್ಷಕರ ಕ್ಷೇತ್ರದ ಪ್ರಕಾಶ್ ಹುಕ್ಕೇರಿ ಅವರು ತಂದೆ-ತಾಯಿ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದರು. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿಯ ಬಸವರಾಜ ಹೊರಟ್ಟಿ, ದೇವರ ಹೆಸರಲ್ಲಿ ಪದಗ್ರಹಣ ಮಾಡಿದರು.
ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಎಂ.ಬಿ.ಪಾಟೀಲ್, ಹಾಲಪ್ಪ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.