

ಬೆಂಗಳೂರು: 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ಶನಿವಾರ ನಡೆದ ಮೊದಲ ದಿನದ ಸಿಇಟಿ ಪರೀಕ್ಷೆಯೂ ಸುಸೂತ್ರವಾಗಿ ನಡೆದಿದೆ. ಪಿಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆ ಶಿಕ್ಷಕರ ನೇಮಕಾತಿ ಪರೀಕ್ಷೆ ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ನಡೆಸಿ ಒಳ ಬಿಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು.
ರಾಜ್ಯಾದ್ಯಂತ 435 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1.05 ಲಕ್ಷ ಅಭ್ಯರ್ಥಿಗಳು ಮೊದಲ ದಿನದ ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್, ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವ ಮೂಲಕ ಅಭ್ಯರ್ಥಿಗಳ ಚಲನ ವಲನಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು. ಪರೀಕ್ಷಾ ಕೊಠಡಿಯ ಒಳಗೆ ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ಕೈಗಡಿಯಾರ, ಎಲೆಕ್ಟ್ರಾನಿಕ್ ಉಪಕರಣ ನಿಷೇಧವಿದ್ದ ಹಿನ್ನೆಲೆಯಲ್ಲಿ ಸಿಬ್ಬಂದಿ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಇಲ್ಲ ಎಂದು ಖಚಿತವಾದ ಬಳಿಕವಷ್ಟೇ ಕಳುಹಿಸುತ್ತಿದ್ದ ದೃಶ್ಯ ಕಂಡುಬಂತು. ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಖಾಕಿ ಸರ್ಪಗಾವಲು ಹಾಕಲಾಗಿತ್ತು. ಮೀಸಲು ಪಡೆಯನ್ನೂ ನಿಯೋಜಿಸಲಾಗಿತ್ತು.