

ನರಗುಂದ: ವಿಧಾನಸಭಾ ಮತಕ್ಷೇತ್ರದಲ್ಲಿ ನಡೆಯುತ್ತಿದೆ ಎನ್ನಲಾದ 500 ಕೋಟಿ ರೂ. ಮೊತ್ತದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ಅಧಿಕಾರಿಗಳ ತನಿಖಾ ತಂಡ ಪಟ್ಟಣಕ್ಕೆ ಗುರುವಾರ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿತು.
2022-23ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ಪಟ್ಟಣದ ಅಧ್ಯಾಪಕ ನಗರ, ಸರಸ್ವತಿ ನಗರ ಬಡಾವಣೆಯಲ್ಲಿ 6.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸಿಸಿ ರಸ್ತೆ, ಚರಂಡಿ, ರಾಜಕಾಲುವೆ, ಹೊಳೆಆಲೂರಿನ ಮಲಪ್ರಭಾ ನದಿಗೆ ನಿರ್ಮಿಸುತ್ತಿರುವ ಸೇತುವೆ ಹಾಗೂ ನರಗುಂದ ಕ್ಷೇತ್ರಕ್ಕೆ ಒಳಪಡುವ ಗದಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆದಿರುವ ಹಲವಾರು ಕಾಮಗಾರಿಗಳ ಗುಣಮಟ್ಟವನ್ನು ಅಧಿಕಾರಿಗಳು ಪರಿಶೀಲಿಸಿದರು.
ಮಾಜಿ ಶಾಸಕ ಬಿ.ಆರ್. ಯಾವಗಲ್ ಅವರು, ನರಗುಂದ ಮತಕ್ಷೇತ್ರದಲ್ಲಿ ಅನುಷ್ಠಾನಗೊಂಡಿರುವ ಅಂದಾಜು 500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕಳಪೆಯಾಗಿವೆ. ಶಾಸಕ ಸಿ.ಸಿ. ಪಾಟೀಲ ಅವರು ಅರ್ಹತೆ ಇಲ್ಲದವರಿಗೆ ಹಲವಾರು ಕಾಮಗಾರಿಗಳ ಟೆಂಡರ್ ನೀಡಿದ್ದರಿಂದ ಕ್ಷೇತ್ರದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಆಗಮಿಸಿರುವ ತಂಡವು ಬುಧವಾರ ಹಾಗೂ ಗುರುವಾರ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ, ರಸ್ತೆ ಅಗೆದು ಪರಿಶೀಲನೆ ನಡೆಸಿತು.
ವಿವಿಧ ಇಲಾಖೆಗಳ ಇಂಜಿನಿಯರ್‌ಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.