

ಹನೂರು: ಸಮೀಪದ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆ ಮುಂಭಾಗ ಬುಧವಾರ ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ದಿಢೀರ್ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಹನೂರು ತಾಲೂಕಿನ ಅಜ್ಜೀಪುರ ಗ್ರಾಮದ ಮುಳ್ಳಪ್ಪ ಅವರ ಪತ್ನಿ ನಮಿತಾ (22) ಮೃತೆ. ಮಧ್ಯಾಹ್ನ ಸುಮಾರು 3.30ರಲ್ಲಿ ಆರೋಗ್ಯ ತಪಾಸಾಣೆಗಾಗಿ ಆಸ್ಪತ್ರೆಗೆ ಆಗಮಿಸಿ ಗ್ರಾಮಕ್ಕೆ ತೆರಳಲು ರಸ್ತೆ ದಾಟುತ್ತಿದ್ದರು. ಈ ವೇಳೆ ಮ.ಬೆಟ್ಟದ ಕಡೆಯಿಂದ ವೇಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ನಮಿತಾ ಸ್ಥಳದಲ್ಲೇ ಮೃತಪಟ್ಟರು. ನಮಿತಾಗೆ ಒಂದೂವರೆ ವರ್ಷದ ಹೆಣ್ಣು ಮಗುವಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಗ್ರಾಮಸ್ಥರ ಆಕ್ರೋಶ: ಘಟನೆಯಿಂದ ಆಕ್ರೋಶಗೊಂಡ ಕಾಮಗೆರೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ರಸ್ತೆ ಸಂಚಾರ ತಡೆದು ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಚೆಲುವರಾಜು, ಪಟ್ಟಣ ಠಾಣೆ ಇನ್‌ಸ್ಪೆಕ್ಟರ್ ಮಹೇಶ್‌ಕುಮಾರ್ ಹಾಗೂ ಹನೂರು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಶಶಿಕುಮಾರ್ ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದಾದರು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಗ್ರಾಮದ ಪರಿಮಿತಿಯಲ್ಲಿ ವಾಹನಗಳ ವೇಗ ಹೆಚ್ಚಾಗಿದೆ. ಇದರಿಂದ ಆಸ್ಪತ್ರೆಯ ಮುಂಭಾಗ ಹಾಗೂ ಆಸುಪಾಸು ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಹಂಪ್ ನಿರ್ಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೂರು ತಿಂಗಳ ಹಿಂದೆಯೇ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದರು.
ಇನ್‌ಸ್ಪೆಕ್ಟರ್ ಶಶಿಕುಮಾರ್ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಹಂಪ್ ಅಳವಡಿಸಲು ಕ್ರಮವಹಿಸಲಾಗುವುದು. ಅಲ್ಲಿಯವರೆಗೆ ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.
ಸ್ಥಳಕ್ಕಾಗಮಿಸಿದ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಶಂಕರ್ ಮೃತರ ಕುಟುಂಬಸ್ಥರಿಗೆ 25 ಸಾವಿರ ರೂ. ನೀಡಿ ನ್ಯಾಯಾಲಯ ತೀರ್ಮಾನಿಸಿದಂತೆ ಇನ್ನುಳಿದ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.