

ಮಂಡ್ಯ: ಒಮಿಕ್ರಾನ್ ಭೀತಿ ನಡುವೆ ಮಹಾಮಾರಿ ಕರೊನಾ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಭಾಗದ ಶಾಲೆಗಳಿಗೂ ಕರೊನಾ ಸೋಂಕು ವಕ್ಕರಿಸಿದ್ದು, ಆತಂಕ ಮೂಡಿಸಿದೆ. ಮದ್ದೂರು ತಾಲೂಕಿನ ಹಳ್ಳಿಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಐದು ಮಕ್ಕಳಿಗೆ ಕರೊನಾ ಪಾಸಿಟಿವ್ ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಶಾಲೆಯ 1ನೇ ತರಗತಿಯಿಂದ 7ನೇ ತರಗತಿವರೆಗೆ ಒಟ್ಟು 60 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಡಿ.28ರಂದು ಸಾಮೂಹಿಕವಾಗಿ ಕೋವಿಡ್ ಪರೀೆಗೆ ಒಳಪಡಿಸಲಾಗಿತ್ತು. 5 ಮಕ್ಕಳಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ನೆಗೆಟಿವ್ ಬಂದಿದೆ. ವಿದ್ಯಾರ್ಥಿಗಳಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಯ ಎಲ್ಲ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ಇಂದಿನಿಂದ(ಬುಧವಾರ) ಒಂದು ವಾರ ಶಾಲೆಯನ್ನು ಸೀಲ್ಡ್ ಡೌನ್ ಮಾಡಲಾಗಿದೆ.
ಸೋಂಕಿತ ಮಕ್ಕಳಿಗೆ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಮಕ್ಕಳ ಕುಟುಂಬದ ಸದಸ್ಯರಿಗೂ ಕರೊನಾ ಟೆಸ್ಟ್ ಮಾಡಿದ್ದು, ಗುರುವಾರ ರಿಪೋರ್ಟ್ ಬರುವ ಸಾಧ್ಯತೆ ಇದೆ. ಗ್ರಾಮಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್, ಟಿಎಚ್ಒ ನಾಗೇಂದ್ರರಾವ್ ಹಾಗೂ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಗ್ರಾಮಸ್ಥರಿಗೆ ಧೈರ್ಯ ತುಂಬಿ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದರು.
ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದ ಬಿಇಒ ಮಹದೇವು ಮಾತನಾಡಿ, ವಿದ್ಯಾರ್ಥಿಗಳಿಗೆ ಕೋವಿಡ್ ಕಾಣಿಸಿಕೊಂಡಿರುವುದರಿಂದ ಸೋಮವಾರದವರೆಗೆ ಶಾಲೆಗೆ ರಜೆ ನೀಡಲಾಗಿದೆ. ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.