ಸಬ್ ರಿಜಿಸ್ಟ್ರಾರ್ ಕಚೇರಿ ಸ್ಥಳಾಂತರಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ

MUKKATIRA APPAIHA
Published on

ಮಡಿಕೇರಿ: ನಗರದಲ್ಲಿರುವ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಮಡಿಕೇರಿ ತಾಲೂಕು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸುವ ಮೂಲಕ ಸಾರ್ವಜನಿಕರ ಹಣ ಪೋಲಾಗುವುದನ್ನು ತಪ್ಪಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅರ್ಜಿದಾರರ ಹಿತದೃಷ್ಟಿಯಿಂದ ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಕಟ್ಟಡದಲ್ಲಿ ಇರಬೇಕೆನ್ನುವ ಉದ್ದೇಶದಿಂದ ನಗರದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಮಿನಿ ವಿಧಾನಸೌಧ ನಿರ್ಮಿಸಲಾಗಿದೆ. ಕಟ್ಟಡ ಉದ್ಘಾಟನೆಗೊಂಡು ಹಲವು ದಿನಗಳೇ ಕಳೆದಿದ್ದರು ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಸ್ಥಳಾಂತರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಉಪ ನೋಂದಣಾಧಿಕಾರಿಗಳ ಕಚೇರಿ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ರೂಪದಲ್ಲಿ ವಾರ್ಷಿಕ ಲಕ್ಷಾಂತರ ಹಣ ಪೋಲಾಗುತ್ತಿದೆ. ಇದು ಸಾರ್ವಜನಿಕರ ತೆರಿಗೆ ಹಣವಾಗಿರುವುದರಿಂದ ಈ ಹೊರೆಯನ್ನು ತಪ್ಪಿಸಲು ತಕ್ಷಣ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ.

ಮಾಹಿತಿ ಕೊರತೆ: ಮಡಿಕೇರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ. ವಿವಿಧ ಕಡತಗಳಿಗೆ ನೀಡಬೇಕಾಗಿರುವ ದಾಖಲೆಗಳ ಮಾಹಿತಿಯ ಕೊರತೆ ಎದುರಾಗುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಆದ್ದರಿಂದ ಕಡತಗಳಿಗೆ ಯಾವ ಯಾವ ದಾಖಲೆಗಳನ್ನು ಲಗತ್ತಿಸಬೇಕು ಎನ್ನುವುದರ ಬಗ್ಗೆ ಅಧಿಕಾರಿಗಳು ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಇದೇ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿಗಳಿಗೆ ಆಮ್ ಆದ್ಮಿ ಪಾರ್ಟಿ ಮೂಲಕ ಮನವಿ ಸಲ್ಲಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಮುಕ್ಕಾಟಿರ ಅಪ್ಪಯ್ಯ ಆರೋಪಿಸಿದ್ದಾರೆ.

ಮಾಹಿತಿಯ ಕೊರತೆಯಿಂದ ಸಾರ್ವಜನಿಕರು ನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಲಂಚಕ್ಕಾಗಿ ಕಡತ ವಿಲೇವಾರಿ ವಿಳಂಬವಾಗುತ್ತಿದೆ ಎನ್ನುವ ಸಂಶಯ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಆದ್ದರಿಂದ ನೂತನ ತಾಲ್ಲೂಕು ಕಚೇರಿ ಇರುವ ಮಿನಿ ವಿಧಾನಸೌಧದಲ್ಲಿ ಯಾವ ಅರ್ಜಿಗೆ ಯಾವ ದಾಖಲೆಗಳನ್ನು ತರಬೇಕು ಮತ್ತು ಯಾವ ಅರ್ಜಿ ಎಷ್ಟು ದಿನಗಳಲ್ಲಿ ವಿಲೇವಾರಿಯಾಗುತ್ತದೆ ಎನ್ನುವ ಬಗ್ಗೆ ಬಹಿರಂಗವಾಗಿ ಫಲಕಗಳನ್ನು ಅಳವಡಿಸಬೇಕು. ಈ ಕ್ರಮದಿಂದ ಗ್ರಾಮೀಣ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net