ಡಾ. ಮಂತರ್ ಗೌಡ ಅಭಿನಂದನಾ ಸಮಾರಂಭ

16MDK15
Published on

ಮಡಿಕೇರಿ:

ಚುನಾವಣೆ ಸಂದರ್ಭ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳು ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ನುಡಿದಂತೆ ನಡೆಯುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತೀ ಬೂತ್ ಮಟ್ಟದಲ್ಲಿ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ಡಾ.ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಗುರಿಯನ್ನು ನಾನು ಹೊಂದಿದ್ದೇನೆ, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾದರೂ ನನ್ನ ಗಮನಕ್ಕೆ ತಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಜನಸೇವೆ ಮಾಡಬೇಕು.
ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್‌ನತ್ತ ಒಲವು ತೋರುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಚುನಾವಣಾ ಸಂದರ್ಭ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ಪ್ರತಿ ವಾರ್ಡ್‌ಗಳಿಗೂ ಭೇಟಿ ನೀಡಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು.

ಕಾರ್ಯಕರ್ತರ ನಿರಂತರ ಶ್ರಮದಿಂದ ಇಂದು ಕೊಡಗಿನಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇನ್ನು ಮುಂದೆ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು, ಲೋಕಸಭಾ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು. ಭಿನ್ನಾಭಿಪ್ರಾಯಗಳನ್ನು ಬಿಟ್ಟು, ಮುಂದಿನ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು ಎಂದರು.

ಮಾಜಿ ಸಚಿವ ಎಂ.ಸಿ. ನಾಣಯ್ಯ ಮಾತನಾಡಿ, ೨೦- ೨೫ ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಕೊಡಗಿನಲ್ಲಿ ಜಯ ಸಾಧಿಸಿದೆ. ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಶ್ರಮ ಇದರಲ್ಲಿ ಅಡಗಿದೆ ಎಂದರು.

ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ.ರಮೇಶ್ ಮಾತನಾಡಿ, ಕ್ಷೇತ್ರದ ಮತದಾರರ ಆಶೀರ್ವಾದದಿಂದ ಬಹುಮತದೊಂದಿಗೆ ಡಾ.ಮಂತರ್ ಗೌಡ ಗೆಲುವು ಸಾಧಿಸಿದ್ದಾರೆ. ಜನರ ಪ್ರೀತಿ ವಿಶ್ವಾಸಕ್ಕಾಗಿ ನಾವೆಲ್ಲರೂ ಪ್ರಾಮಾಣಿಕ ಸೇವೆ ಮಾಡಬೇಕಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಹೆಚ್.ಎಂ. ನಂದಕುಮಾರ್, ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ಜಯೇಂದ್ರ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿದರು.
ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ. ರಾಜೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಹಾಗೂ ಕಾಂಗ್ರೆಸ್ ಜಿಲ್ಲಾ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಡಿಕೇರಿ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಲಾಯಿತು.

ಇದೇ ಸಂದರ್ಭ ನಿರಂಜನ್ ಹಾಗೂ ಸಂಗಡಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎಂ.ಹಂಸ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಸದಸ್ಯ ಅಬ್ದುಲ್ ಗಫೂರ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಸೇವದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಕೆ.ಆರ್.ದಿನೇಶ್, ಮಾಜಿ ಸೈನಿಕ ಘಟಕದ ಜಿಲ್ಲಾಧ್ಯಕ್ಷ ಗಣೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net