ಬೆಟ್ಟಳ್ಳಿ ಮಾರಮ್ಮನಿಗೆ ಪನ್ನೀರು, ಎಳನೀರು ಅಭಿಷೇಕ

23 HANUR 5
Published on

 ಹನೂರು: ಬೆನಕನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ದೇಗುಲ ಸೇರಿದಂತೆ ತಾಲೂಕಿನ ವಿವಿಧ ದೇಗುಲಗಳಲ್ಲಿ ಶನಿವಾರ ವಿಶೇಷ ಪೂಜೆ ನೆರವೇರಿದ್ದು, ಭಕ್ತರು ದೇವರ ದರ್ಶನ ಪಡೆದರು.

ಹನೂರಿನ ಶ್ರೀ ಬೆಟ್ಟಳ್ಳಿ ಮಾರಮ್ಮ, ಆರ್.ಎಸ್ ದೊಡ್ಡಿಯ ಮಹದೇಶ್ವರಸ್ವಾಮಿ, ದಿಂಬಾಳೇಶ್ವರ, ಮಂಗಲದ ಕೋಣನ ಮಾರಮ್ಮ, ವೈಶಂಪಾಳ್ಯದ ಶಿವಲಂಕಾರೇಶ್ವರ, ಕೌದಳ್ಳಿ ಮಹದೇಶ್ವರ, ಲೊಕ್ಕನಹಳ್ಳಿಯ ಸಂಪಿಗೇಶ್ವರ, ಬಂಡಳ್ಳಿಯ ಈಶ್ವರ ದೇಗುಲ ಸೇರಿದಂತೆ ತಾಲೂಕಿನ ಇತರ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಿದವು. ಭಕ್ತರು ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸುವ ಮೂಲಕ ದೇವರ ದರ್ಶನ ಪಡೆದರು. ದೇಗುಲಗಳು ಬೆಳಗ್ಗೆಯಿಂದ ಸಂಜೆ ತನಕ ಭಕ್ತಗಣದಿಂದ ತುಂಬಿ ತುಳುಕುತ್ತಿತ್ತು. ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಸಾಮಾನ್ಯವಾಗಿ ಎಲ್ಲ ದೇಗುಲಗಳು ತಳಿರು, ತೋರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗಾರಗೊಂಡಿತ್ತು.

ಬೆಟ್ಟಳ್ಳಿ ಮಾರಮ್ಮನಿಗೆ ಕುಂಕುಮಾಲಂಕಾರ: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಮುಂಜಾನೆ 5.30ಕ್ಕೆ ದೇವಿಗೆ ಪನ್ನೀರು, ಎಳನೀರು, ಅರಿಸಿಣ, ಕುಂಕುಮ, ಜೇನುತುಪ್ಪ, ಹಾಲು, ಮೊಸರು ಹಾಗೂ ಗಂಧದ ಅಭಿಷೇಕ ನೆರವೇರಿಸಲಾಯಿತು. ಬಳಿಕ ಮೂರ್ತಿಯನ್ನು ಕುಂಕುಮದಿಂದ ಸಿಂಗರಿಸಿ ದೀಪ, ಧೂಪಧಾರತಿ ಸೇವೆಯೊಂದಿಗೆ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಪಟ್ಟಣ ಸೇರಿದಂತೆ ಮಂಗಲ, ಭೈರನತ್ತ, ಉದ್ದನೂರು, ಬೆಳತ್ತೂರು, ಅಜ್ಜೀಪುರ, ಮಾಲಾಪುರ, ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ, ಆರ್.ಎಸ್ ದೊಡ್ಡಿ ಗ್ರಾಮಗಳಿಂದ ಆಗಮಿಸಿದ ಭಕ್ತರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇಗುಲ ಮುಂಭಾಗ ಉಪ್ಪು ಸುರಿದು ನಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net