

ಬಳ್ಳಾರಿ : ರೈತ, ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ವತಿಯಿಂದ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ಸಂಘಟನೆ ಜಿಲ್ಲಾಧ್ಯಕ್ಷ ಎ.ದೇವದಾಸ್ ಹೇಳಿದರು.
ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನ.26ರಿಂದ 28ರ ವರೆಗೆ 72 ಗಂಟೆಗಳ ಬೃಹತ್ ರಾಜ ಭವನ್ ಚಲೋ ಧರಣಿ ನಡೆಯಲಿದೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸಿ, ಧರ್ಮನಿರಪೇಕ್ಷ (ಜಾತ್ಯಾತೀತ), ಪ್ರಜಾಪ್ರಭುತ್ವ ಗಣತಂತ್ರದ ಸಂವಿಧಾನ ರಕ್ಷಣೆಗಾಗಿ, ರೈತ-ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳು ಹಾಗೂ ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.
2014 ರಿಂದಲೂ ದೇಶದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಕ್ರಮಣಕಾರಿಯಾಗಿ ರೂಪಿಸುತ್ತಿರುವ ಕಾರ್ಪೊರೇಟ್ ಬಂಡವಾಳ ಪರ ನವ ಉದಾರವಾದಿ ನೀತಿಗಳು ದೇಶದ ದುಡಿಯುವ ಜನರನ್ನು ಸಂಕಷ್ಟಕ್ಕೆ ದೂಡಿದೆ. ಕಾರ್ಪೊರೇಟ್ ತೆರಿಗೆಗಳನ್ನು ಕಡಿತ ಮಾಡುತ್ತಿರುವ ಕೇಂದ್ರ ಸರ್ಕಾರ, ಸಾಮಾನ್ಯ ಜನತೆಯ ಮೇಲೆ ಜಿಎಸ್‌ಟಿ ಹೊರೆ ವಿಧಿಸಿದೆ. ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ಬಹುತೇಕ ಸಾರ್ವಜನಿಕ ಸೇವೆಗಳ ಬಳಕೆಗೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವುದರಿಂದ ಎಲ್ಲ ಅಗತ್ಯ ಸರಕುಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು, ಜನತೆ ತತ್ತರಿಸುವಂತಾಗಿದೆ ಎಂದು ತಿಳಿಸಿದರು.
ದೇಶದ ಸಂಪತ್ತಾದ ವಿದ್ಯುತ್, ರೈಲ್ವೆ, ಕಲ್ಲಿದ್ದಲು, ದೂರ ಸಂಪರ್ಕ, ವಿಮಾ ಕ್ಷೇತ್ರ, ವಿಮಾನಯಾನ, ರಕ್ಷಣಾ ಸಾಮಾಗ್ರಿ ಉತ್ಪಾದನಾ ಕೈಗಾರಿಕೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ದೆಹಲಿಯಲ್ಲಿ ಸತತ 13 ತಿಂಗಳ ಕಾಲ ರೈತರು ಐತಿಹಾಸಿಕ ಹೋರಾಟ ನಡೆಸಿದ ಪರಿಣಾಮ ಮೋದಿ ಸರ್ಕಾರ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ವಾಪಸು ಪಡೆಯಿತು. ಆದರೂ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾಯ್ದೆ , ವಿದ್ಯುತ್ ತಿದ್ದುಪಡಿ ಮಸೂದೆ ರದ್ದತಿ ಮುಂತಾದ ವಿಷಯಗಳಲ್ಲಿ ರೈತರಿಗೆ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಈ ಧೋರಣೆಗಳು ರೈತಾಪಿ ವರ್ಗವನ್ನು ಸಾಲದ ಸುಳಿಗೆ ಸಿಲುಕಿಸಿ ಕೃಷಿಯಿಂದ ಹೊರ ದೂಡಲಾಗುತ್ತಿದೆ. ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ. ಕೃಷಿ ಆರ್ಥಿಕತೆ ಬಿಕ್ಕಟ್ಟಿನಲ್ಲಿ ಸಾಗುತ್ತಿದೆ ಎಂದರು.
ರೈತರಿಗೆ ನೀಡುವ, ಬೀಜ, ರಸಗೊಬ್ಬರ, ಹಾಗೂ ವಿದ್ಯುತ್‌ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಉತ್ಪನ್ನಗಳಿಗೆ ಎಂ.ಎಸ್. ಸ್ವಾಮಿನಾಥನ್ ಶಿಫಾರಸಿನ ಸೂತ್ರದ ಪ್ರಕಾರ ಕನಿಷ್ಟ ಬೆಂಬಲ ಬೆಲೆ ಹಾಗೂ ಖರೀದಿ ಖಾತರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತ ವಿರೋಧಿ ರಾಜ್ಯ ಕೃಷಿ ಕಾಯ್ದೆಗಳಾದ ಕರ್ನಾಟಕ ರಾಜ್ಯ ಭೂಸುಧಾರಣಾ ತಿದ್ದುಪಡಿ ಕಾಯ್ದೆ-2020, ಕರ್ನಾಟಕ ಎಪಿಎಂಸಿ ತಿದ್ದುಪಡಿ ಕಾಯ್ದೆ-2020, ಕರ್ನಾಟಕ ಜಾನುವಾರು ಸಂರಕ್ಷಣ ತಿದ್ದುಪಡಿ ಕಾಯ್ದೆ-2020 ರದ್ದು ಗೊಳಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಜೆ.ಸತ್ಯಬಾಬು, ಎ.ಎಚ್.ಆದಿಮೂರ್ತಿ, ಸಂಗನಕಲ್ಲು ಕೃಷ್ಣಪ್ಪ, ಗೋವಿಂದ್, ಗಾಳಿ ಬಸವರಾಜ್ ಇನ್ನಿತರರಿದ್ದರು.