ಕಾಶ್ಮೀರದಲ್ಲಿ ಗುಂಡಿನ ದಾಳಿಗೆ ಖಂಡನೆ, ಉಗ್ರರನ್ನು ಸದೆಬಡೆಯಲು ಎಬಿವಿಪಿ ಒತ್ತಾಯ

ABVP PROTEST PUHALGAMA
ವಿಜಯಪುರ ಜಿಲ್ಲಾಡಳಿತ ಕಚೇರಿ ಎದುರು ಎಬಿವಿಪಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Published on

ವಿಜಯಪುರ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪದಾಧಿಕಾರಿಗಳು ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನೇತೃತ್ವ ವಹಿಸಿದ್ದ ಮಲ್ಲಿಕಾರ್ಜುನ ಮಾಳಿ ಮಾತನಾಡಿ, ಜಮ್ಮು ಕಾಶ್ಮೀರದ ಪಹಲ್ಗಾಮನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕ ಸತ್ಯ, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.

ಮಹಾನಗರ ಸಹ ಕಾರ್ಯದರ್ಶಿ ಅಭಿಷೇಕ ಬಡಿಗೇರ ಮಾತನಾಡಿ, ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಬಿಗಿ ಭದ್ರತೆ ಒದಗಿಸಿದರೂ ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ. ಇತ್ತೀಚೆಗೆ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಮಾರುಕಟ್ಟೆಗಳಲ್ಲಿ ದಾಳಿಗಳು ಹಾಗೂ ಇಂದು ನಡೆದಿರುವ ಪ್ರವಾಸಿಗರ ಮೇಲಿನ ದಾಳಿ ಗಮನಿಸುವುದಾದರೆ ಕಾಶ್ಮೀರದ ಶಾಂತಿ ಮತ್ತು ಭಾರತದೊಂದಿಗಿನ ಏಕತೆಗೆ ಉಗ್ರರು ಅರ್ಥಾತ್ ಪ್ರತ್ಯೇಕವಾದಿಗಳು ತೀವ್ರ ಸವಾಲೊಡ್ಡುತ್ತಿರುವುದು ಕಳವಳಕಾರಿ ಸಂಗತಿ. ಆದ್ದರಿಂದ ಕೇಂದ್ರ ಸರ್ಕಾರ ಉಗ್ರದ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಭಯೋತ್ಪಾದಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವವರಿಗೆ ಹಾಗೂ ಹತ್ಯೆಗೊಳಗಾಗಿರುವವರಿಗೆ ವಿದ್ಯಾರ್ಥಿ ಪರಿಷತ್ ಸಂತಾಪ ಸೂಚಿಸುತ್ತದೆ ಎಂದರು.

ರಾಜ್ಯ ಕಾರ್ಯ ಸಮಿತಿ ಸದಸ್ಯೆ ಕುಮಾರಿ ಸುರೇಖಾ ಕುಲಕರ್ಣಿ ಮಾತನಾಡಿ, ಜಮ್ಮು ಕಾಶ್ಮೀರದಲ್ಲಿ ಈಗಾಗಲೇ 371 ರದ್ದಾಗಿ ಶಾಂತಿ ಸಹಬಾಳ್ವೆ ಇದ್ದರೂ ಮೇಲಿಂದ ಮೇಲೆ ಇಂತಹ ದುಷ್ಟ ಕೃತ್ಯ ಎಸಗುತ್ತಿರುವುದು ಖಂಡನೀಯ. ಇಂತಹ ಕೃತ್ಯಗಳು ಮರುಕಳಿಸದಿರುವಂತೆ ಇನ್ನಷ್ಟು ಬಿಗಿ ಭದ್ರತೆ ಹಾಗೂ ಪ್ರವಾಸಿ ತಾಣಗಳಿಗೆ ಸೂಕ್ತ ಭದ್ರತೆ ನೀಡುವಂತೆ ಮನವಿ ಮಾಡಿಕೊಂಡರು.

ಪ್ರಮುಖರಾದ ಸಂದೀಪ ಅರಳಗುಂಡಿ, ಚೇತನ ಕೋರವಾರ, ನೇಸರ ಬಜಂತ್ರಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net