ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯ: ನಗರದಲ್ಲಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ

ABVP protest Mandya
Published on

ಮಂಡ್ಯ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಜಿಲ್ಲಾಕೇಂದ್ರದ ಶಾಲೆ-ಕಾಲೇಜಿಗೆ ತೆರಳಲು ಅನುಕೂಲವಾಗುವಂತೆ ಸಮರ್ಪಕ ಸರ್ಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಬಸ್ ನಿಲ್ದಾಣದ ಬಳಿ ಎಬಿವಿಪಿ ನೇತೃತ್ವದಲ್ಲಿ ಜಮಾಯಿಸಿದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ನಗರದ ಶಾಲಾ, ಕಾಲೇಜುಗಳಲ್ಲಿ ಗ್ರಾಮೀಣ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪ್ರಯಾಣಕ್ಕೆ ಸರ್ಕಾರಿ ಬಸ್ ಅವಲಂಬಿಸಿದ್ದಾರೆ. ಆದರೆ ನಿಗದಿತ ಸಮಯಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚಾರ ಮಾಡುತ್ತಿಲ್ಲ. ಅಲ್ಲದೆ ಬರುವ ಬಸ್‌ಗಳು ನಿಗದಿತ ಸ್ಥಳದಲ್ಲಿ ನಿಲುಗಡೆ ಮಾಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

ಸ್ಥಳೀಯ ಬಸ್‌ಗಳ ಕೊರತೆ ಇರುವುದರಿಂದ ಹಲವು ಮಾರ್ಗಗಳಲ್ಲಿ ನಿರಂತರ ಸೇವೆ ಇಲ್ಲವಾಗಿದೆ. ವೇಳಾಪಟ್ಟಿ ಪಾಲನೆ ಮಾಡದಿರುವುದರಿಂದ ಬಸ್‌ಗಳು ನಿಗದಿತ ಸಮಯದಲ್ಲಿ ಸಂಚಾರ ಮಾಡುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಹೊಸ ಬಸ್‌ಗಳ ಸಂಚಾರ ಆರಂಭ ಮಾಡದಿರುವುದು ಹಾಗೂ ಬಸ್‌ಗಳ ಸ್ವಚ್ಛತೆ, ನಿರ್ವಹಣೆ ಕೊರತೆಯಿಂದ ಪ್ರಯಾಣಿಕರಿಗೆ ತೊಂದರೆ ಎದುರಾಗಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಸ್ಥಳೀಯ ಬಸ್‌ಗಳ ಸಂಖ್ಯೆ ಹೆಚ್ಚಿಸುವುದರ ಜತೆಗೆ ನಿಗದಿತ ಮಾರ್ಗದಲ್ಲಿ ಸಂಚರಿಸಲು ಕ್ರಮ ಕೈಗೊಳ್ಳಬೇಕು. ಬಸ್ ಸಂಚಾರದ ಬಗ್ಗೆ ಪ್ರತಿ ನಿಲ್ದಾಣದಲ್ಲಿ ವೇಳಾಪಟ್ಟಿ ಪ್ರಕಟಿಸಬೇಕು. ನಿಗದಿತ ಸಮಯದಲ್ಲಿ ಸಂಚರಿಸಲು ಸೂಚನೆ ನೀಡಬೇಕು. ಜನಸಂಖ್ಯೆಗೆ ಅನುಗುಣವಾಗಿ ಬಸ್ ಸೌಲಭ್ಯ ಕಲ್ಪಿಸುವುದರ ಜತೆಗೆ ಹೊಸ ಬಸ್ ಮಾರ್ಗಗಳನ್ನು ಪರಿಚಯಿಸಬೇಕು. ಬಸ್‌ಗಳ ನಿರ್ವಹಣೆ ಹಾಗೂ ಸ್ವಚ್ಛತೆಗೆ ವಿಶೇಷ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಹರ್ಷ, ರಾಜ್ಯ ಸಹ ಕಾರ್ಯದರ್ಶಿ ಎಚ್.ಬಿ.ಪ್ರಜ್ವಲ್, ಗುರುಪ್ರಸಾದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net