

ಹುಬ್ಬಳ್ಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದ ಅಂಬೇಡ್ಕರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಪದವಿ ತರಗತಿಗಳು ಆರಂಭಗೊಂಡು ತಿಂಗಳು ಕಳೆದರೂ ಇದುವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿಲ್ಲ. ಇದರಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ರಾಜ್ಯದ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರಿಂದ ಅವಲಂಬಿತವಾಗಿರುವ ಕಾರಣ ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಬಡ, ಕೂಲಿ ಕಾರ್ವಿುಕರ ಮಕ್ಕಳು ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ಮಾಡುವ ಉದ್ದೇಶದಿಂದ ದಾಖಲಾತಿ ಮಾಡಿರುತ್ತಾರೆ. ಆದರೆ, ಪ್ರತಿ ವರ್ಷ ಈ ರೀತಿಯ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಖಾಸಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನ ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಆದರೆ, ಶೇ. 50ರಷ್ಟು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಅನ್ಯಾಯ ಮಾಡದಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಕಾಲೇಜುಗಳ ಮೂಲ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್, ಇನ್ನಿತರ ಸಲಕರಣೆಗಳನ್ನು ಒದಗಿಸಬೇಕು ಎಂದು ಮನವಿ ಮಾಡಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿ ಶಹರ ತಹಸೀಲ್ದಾರ ಮಹೇಶ ಗಸ್ತೆ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಎಬಿವಿಪಿ ಮಹಾನಗರ ಕಾರ್ಯದರ್ಶಿ ದಾನೇಶ ಕಿತ್ತೂರ, ವಿಕ್ರಂ ಗಲಾಂಡೆ, ಅಥರ್ವ ಚವ್ಹಾಣ, ದರ್ಶನ್ ಹೆಗಡೆ, ಮನೋಜ್, ಈಶಿಕಾ, ಬಸಮ್ಮ, ಲಕ್ಷ ಣ ಹಾಗೂ ಇತರರು ಇದ್ದರು.