

ಹುಬ್ಬಳ್ಳಿ : ಬೀದರ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳ ಜನಿವಾರ ಹಾಗೂ ಕೈದಾರಗಳನ್ನು ಬಲವಂತವಾಗಿ ತೆಗೆಯಿಸಿ, ಧಾರ್ವಿುಕ ಭಾವನೆಗಳಿಗೆ ಧಕ್ಕೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದ ಬಿವಿಬಿ ಕಾಲೇಜ್ ಬಳಿ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನ್ಯಾಯಸಮ್ಮತವಾಗಿ ನಡೆಸಲು ಹಲವಾರು ರೀತಿಯ ನಿರ್ಬಂಧನೆಗಳು ಇವೆ. ಆದರೆ, ನಿರ್ಬಂಧನೆಗಳ ನೆಪದಲ್ಲಿ ಯಾವುದೇ ಮಾರ್ಗಸೂಚಿ ಇಲ್ಲದೇ ಧಾರ್ವಿುಕ ಭಾವನೆಗಳಿಗೆ ಧಕ್ಕೆ ಮಾಡಿರುವುದು ಸರಿಯಲ್ಲ. ಇಂತಹ ಕ್ರಮಗಳು ಖಂಡನೀಯ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಹಾಗೂ ಪರೀಕ್ಷಾ ಕೇಂದ್ರದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾನಿರತರು ಸರ್ಕಾರವನ್ನು ಒತ್ತಾಯಿಸಿದರು.
ಪರಿಷತ್ ನಗರ ಕಾರ್ಯದರ್ಶಿ ಸಿದ್ಧಾರ್ಥ ಕೋರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.