

ಹುಣಸೂರು: ಕಾಲೇಜು ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಶೀಘ್ರ ಬಿಡುಗಡೆಗೊಳಿಸಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸದಸ್ಯರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಹುಣಸೂರು ಎಬಿವಿಪಿ ಘಟಕದ ಸದಸ್ಯರು ನಗರದ ಸಂವಿಧಾನ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ವಿದ್ಯಾರ್ಥಿ ವೇತನ ನೀಡುವಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ವಿಳಂಬ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಎಬಿವಿಪಿ ಜಿಲ್ಲಾ ಸಹಸಂಚಾಲಕ ಶ್ರೀಕಂಠಮೂರ್ತಿ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಡಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಆದರೆ, ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದೆ ಲಕ್ಷಾಂತರ ವಿದ್ಯಾರ್ಥಿಗಳನ್ನು ಅತಂತ್ರ ಸ್ಥಿತಿಗೆ ತಳ್ಳಿದೆ. ರೈತರ ಮಕ್ಕಳ ಶಿಕ್ಷಣಕ್ಕಾಗಿ ಹಿಂದಿನ ಸರ್ಕಾರ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಿತ್ತು. ಈಗಿನ ರಾಜ್ಯ ಸರ್ಕಾರ ಅದನ್ನು ತಡೆ ಹಿಡಿದು ರೈತರ ಮಕ್ಕಳ ಶಿಕ್ಷಣವನ್ನು ಕಸಿದುಕೊಂಡಿದೆ, 2022-23ನೇಸಾಲಿನಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿ ವೇತನ ತಡೆ ಹಿಡಿದು ಆ ಹಣವನ್ನು ಇನ್ನಿತರ ಯೋಜನೆಗಳಿಗೆ ಬಳಸುತ್ತಿರುವುದು ಖಂಡನೀಯ ಎಂದು ಹೇಳಿದರು.
ಯುಸಿಎಂಎಸ್ ತಂತ್ರಾಂಶದ ಬಳಕೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಮತ್ತು ವಿಶ್ವವಿದ್ಯಾಲಯಗಳ ನಡುವೆ ಸಮನ್ವಯದ ಜತೆಗೆ ತಾಂತ್ರಿಕ ಪರಿಣಿತರ ಕೊರತೆಯಿಂದಾಗಿ ತಂತ್ರಾಂಶದ ಸುಲಭ ಬಳಕೆ ಅಸಾಧ್ಯವಾಗಿದೆ, ಆದ್ದರಿಂದ ಅಧಿಕಾರಿಗಳು ಸಮಜಾಯಿಷಿ ನೀಡಿ ಹೊಣೆಗಾರಿಕೆಯಿಂದ ನುಣಚಿಕೊಳ್ಳದೆ ಜವಾಬ್ದಾರಿಯುತವಾಗಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಬೇಕೆಂದು ಆಗ್ರಹಿಸಿದರು.
ಗ್ರೇಡ್-2 ತಹಸೀಲ್ದಾರ್ ನರಸಿಂಹಯ್ಯ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು. ಎಬಿವಿಪಿ ತಾಲೂಕು ಸಂಚಾಲಕ ಶ್ರೀದತ್ತ, ಸಹ ಕಾರ್ಯದರ್ಶಿಗಳಾದ ಡಿಂಪಲ್, ಕಲ್ಲಪ್ಪ ಹಾಗೂ ಜ್ಞಾನಧಾರ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.