

ಮಂಡ್ಯ: ಮಂಡ್ಯ ವಿಶ್ವವಿದ್ಯಾನಿಲಯ ಸೇರಿದಂತೆ ರಾಜ್ಯದ 9 ವಿವಿಯನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ರಾಜ್ಯಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಪ್ರತಿವರ್ಷ 50,000 ಕೋಟಿ ರೂ ನೀಡುತ್ತಿದೆ. ಇದರಲ್ಲಿ ಶೇ.15ರಷ್ಟು ಅಂದರೆ 500 ಕೋಟಿ ರೂಗಳನ್ನು ವಿಶ್ವವಿದ್ಯಾಲಯಗಳಿಗೆ ನೀಡಿದರೆ ಅವುಗಳ ಸ್ಥಿತಿ ಸುಧಾರಣೆಯಾಗಲಿದೆ. ಆದರೆ ಹಲವು ವರ್ಷದಿಂದ ವಿವಿಗೆ ಅನುದಾನ ನೀಡಿಲ್ಲ. ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ, ಮರು ಎಣಿಕೆ, ಮರು ಮೌಲ್ಯಮಾಪನ ಶುಲ್ಕ ಹಾಗೂ ಆಂತರಿಕ ಹಣಕಾಸು ಉತ್ಪಾದನೆಯ ಮೂಲಕ ಮುನ್ನಡೆಯುತ್ತಿರುವುದು ಅವಮಾನಕರ ಸಂಗತಿ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಗೌರವ, ಹೆಗ್ಗಳಿಕೆ ಇದೆ. ಆದರೆ ಕೇವಲ ಹಣಕಾಸಿನ ದೃಷ್ಟಿಯಿಂದ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಸರ್ಕಾರಕ್ಕೆ ಶೋಭೆ ತರುವಂತಹ ಕಾರ್ಯವಲ್ಲ. ಕಳೆದ ಸರ್ಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಪ್ರಾರಂಭಿಸಿದರೆ ಗ್ರಾಮೀಣ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹೊಸದಾಗಿ ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ, ನೃಪತುಂಗ ವಿಶ್ವವಿದ್ಯಾಲಯ ಹಾಗೂ ಬೀದರ್‌ನಲ್ಲಿ ವಿಶ್ವವಿದ್ಯಾನಿಲಯ ಪ್ರಾರಂಭಿಸುವುದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಆದರೆ ಪ್ರಸ್ತುತ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯಗಳಿಗೆ ಅನುದಾನ ನೀಡಿ, ಅಭಿವೃದಿಪಡಿಸದೆ ಅವುಗಳನ್ನು ಮುಚ್ಚುವುದಕ್ಕೆ ನಿರ್ಧರಿಸಿ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.
ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಿಷ್ಟಗೊಳಿಸುವ ಕಾಳಜಿ ಮತ್ತು ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇತ್ತೀಚಿಗೆ ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವುದರಿಂದ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ಉಚಿತ ಗ್ಯಾರಂಟಿ ಯೋಜನೆಗೆ ಸಾವಿರಾರು ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ನೀಡಲಾಗಿದ್ದು, ಆದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಲು ಮುಂಭಾಗದ ವಿಶ್ವವಿದ್ಯಾನಿಯಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಯಾವ ಶಿಕ್ಷಣ ತಜ್ಞರ ಶಿಫಾರಸಿನ ಮೇಲೆ ವಿವಿ ಮುಚ್ಚುತ್ತಿದ್ದೀರಾ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಎಚ್.ಬಿ.ಪ್ರಜ್ವಲ್, ಮೈಸೂರು ಮಹಾನಗರ ಸಹ ಕಾರ್ಯದರ್ಶಿ ಚಂದನ್, ಮುಖಂಡರಾದ ದರ್ಶನ್, ರೋಹಿತ್, ಪ್ರಶಾಂತ್, ಬಿ.ಎಂ.ಹರ್ಷ ಇತರರಿದ್ದರು.