

ಪಾಂಡವಪುರ: ಕ್ರೀಡೆ ಎಂದ ಮೇಲೆ ಸೋಲು-ಗೆಲುವು ಇದ್ದೇ ಇರುತ್ತದೆ. ಕ್ರೀಡಾಪಟುಗಳು ಸೋಲು-ಗೆಲವು ಎರಡನ್ನೂ ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು. ಆಗ ಮತ್ರ ಕ್ರೀಡೆಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ಜಿಲ್ಲಾ ಪಂಚಾಯಿತಿ ಮಂಡ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಶಾಲೆಗಳ 2024ನೇ ಸಾಲಿನ 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಭಾಗವಹಿಸುವುದೇ ಅತಿ ಮುಖ್ಯ. ವಿದ್ಯಾರ್ಥಿಗಳು ಓದಿನ ಜತೆಯಲ್ಲಿ ಕ್ರೀಡೆ ಮತ್ತು ಇತರ ಪಠ್ಯೇತರ ಚಟುವಟಿಕೆಯಲ್ಲಿ ಸಕ್ತಿಯವಾಗಿ ಪಾಲ್ಗೊಳ್ಳಬೇಕು. ಮುಜುಗರದಿಂದ ಹಿಂದೆ ಸರಿದರೆ ಅವಕಾಶಗಳು ಸಿಗುವುದಿಲ್ಲ. ಇಲ್ಲಿ ಗೆದ್ದವರು ಮತ್ತು ಸೋತವರು ಎಲ್ಲರೂ ವಿಜೇತರೆ. ಹೀಗಾಗಿ ಕ್ರೀಡಾ ಸ್ಫೂರ್ತಿಯಿಂದ ಎಲ್ಲರೂ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಧ್ವಜರೋಹಣ ನೆರವೇರಿಸಲಾಯಿತು. ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ ಶಾಸಕರಿಗೆ ಗೌರವ ಸಲ್ಲಿಸಿದರು. ಬಳಿಕ ಕ್ರೀಡಾ ಜ್ಯೋತಿ ಬೆಳಗಿ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಟಿಎಪಿಸಿಎಂಎಸ್ ನಿರ್ದೇಶಕ ಹರಳಹಳ್ಳಿ ಚಿಟ್ಟಿಬಾಬು ವಿಜೇತರಿಗೆ ಬಹುಮಾನದ ವ್ಯವಸ್ಥೆ ಮಾಡಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಮಂಜುಳಾ, ದೈಹಿಕ ಶಿಕ್ಷಣ ಶಿಕ್ಷಕರಾದ ಕಡತನಾಳು ಶ್ರೀನಿವಾಸ್, ತ್ಯಾಗರಾಜು, ಮಹೇಶ್, ಯುವರಾಜ ಇತರರು ಇದ್ದರು.