ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಮಹಿಳೆಯ ಅಂಗದಾನ

udp-27-kmc
Published on

ಉಡುಪಿ: ಬೈಂದೂರು ತಾಲೂಕಿನ ಮರವಂತೆ ಬಳಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಮಿದುಳು ನಿಷ್ಕ್ರಿಯವಾಗಿದ್ದು, ಕುಟುಂಬದ ಒಪ್ಪಿಗೆ ಮೇರೆಗೆ ಸೋಮವಾರ ಅಂಗದಾನ ನಡೆಸಲಾಗಿದೆ. ಇದರಿಂದ ಸುಮಾರು 6 ರೋಗಿಗಳು ಪ್ರಯೋಜನ ಪಡೆದರು.

ಕೊಡೇರಿ ಶಿಲ್ಪಾ ಮಾಧವ (44) ಎಂಬವರನ್ನು ವೈದ್ಯರು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ನಂತರ ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು. ಅವರ ಪತಿ ಪ್ರಸನ್ನ ಕುಮಾರ್ ಹಾಗೂ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ಇಚ್ಛೆಯನ್ನು ವ್ಯಕ್ತಪಡಿಸಿದರು. ದಾನ ಮಾಡಿದ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು 6 ಜನರ ಜೀವ ಉಳಿಸಲು ಸಹಾಯವಾಗಿದೆ.

ಯಕೃತ್ ಅನ್ನು ಅಸ್ಟರ್ ಸಿ ಎಂ ಐ ಆಸ್ಪತ್ರೆ ಬೆಂಗಳೂರು, ಒಂದು ಮೂತ್ರಪಿಂಡವನ್ನು ಎ.ಜೆ ಆಸ್ಪತ್ರೆ ಮಂಗಳೂರು ಮತ್ತು ಎರಡು ಕಾರ್ನಿಯಾಗಳು, ಒಂದು ಮೂತ್ರಪಿಂಡ ಹಾಗೂ ಚರ್ಮವನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು. ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ವರ್ಗಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net