ಅವಧಿಯಲ್ಲಿ ಗುರಿ, ಪ್ರಗತಿ ಸಾಧಿಸಿ

30 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿವಿಧ ಇಲಾಖೆಗಳ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾಗಿರುವ ಅನುದಾನವನ್ನು ಮಾರ್ಚ್​ 2025ರೊಳಗೆ ಬಳಸಿ ಕ್ರಿಯಾಯೋಜನೆ ಅನುಸಾರ ನಿಗದಿತ ಗುರಿ ಮತ್ತು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 2023-24ನೇ ಸಾಲಿನ ನವೆಂಬರ್​ 2024ರ ಅಂತ್ಯದವರೆಗಿನ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದಿಂದ ಪ್ರತಿ ಇಲಾಖೆಗೆ ಬಿಡುಗಡೆಯಾದ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ವೈಯಕ್ತಿಕ ಮತ್ತು ಸಾಮುದಾಯಿಕ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿಕೈಗೊಳ್ಳಬೇಕು. ಬಹುತೇಕ ಇಲಾಖೆಗಳು ಕ್ರಿಯಾಯೋಜನೆ ಸಲ್ಲಿಸಿ, ಅನುಮೋದನೆ ಪಡೆದುಕೊಂಡಿವೆ. ನಿಗದಿಯಂತೆ ಕಾಲಮಿತಿಯಲ್ಲಿ ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಬೇಕು. ಅನುದಾನ ಲ್ಯಾಪ್ಸ್​ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರದಿಂದ ಅನೇಕ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಕುರಿತು ಸಮಗ್ರ ಮಾಹಿತಿಯನ್ನು ಜಿಲ್ಲೆಯ ಪ್ರತಿ ನಗರ ಮತ್ತು ಗ್ರಾಮಗಳಿಗೆ ತಲುಪಿಸಲು ಜನಜಾಗೃತಿ ಕಾರ್ಯಕ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಬೇಕು ಎಂದರು.

ಸಭೆಗೆ ಕಾರಣ ತಿಳಿಸದೆ ಗೈರಾದ ಅಧಿಕಾರಿಗಳಿಗೆ ನೋಟಿಸ್​ ನೀಡಿ, ಉತ್ತರ ಪಡೆಯುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಜಿಲ್ಲಾ ಪೊಲೀಸ್​ ಅಧೀಕ್ಷ ಡಾ. ಗೋಪಾಲ ಬ್ಯಾಕೋಡ್​, ಉಪ ಪೊಲೀಸ್​ ಆಯುಕ್ತ ಮಹಾನಿಂಗ ನಂದಗಾವಿ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ. ಶುಭ, ತಹಸೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net