ಗುರಿ, ಗುರುವಿದ್ದರೆ ಸಾಧನೆ ಸಾಧ್ಯ

05M.D.R.1
Published on

ಮದ್ದೂರು: ಹಿಂದೆ ಗುರಿ ಮುಂದೆ ಗುರು ಇದ್ದರೆ ಜೀವನದಲ್ಲಿ ವಿದ್ಯಾರ್ಥಿಗಳು ಏನನ್ನಾದರೂ ಸಾಧನೆ ಮಾಡುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದೆಂದು ರೋಟರಿ ಸಂಸ್ಥೆಯ ಜಿಲ್ಲಾ ಮುಖ್ಯಸ್ಥ ಡಾ.ಪ್ರಕಾಶ್ ಅಭಿಪ್ರಾಯಪಟ್ಟರು.


ತಾಲೂಕಿನ ನವಿಲೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಂಗಳೂರು ರೋಟರಿ ಹೈ ಗ್ರೌಂಡ್ಸ್ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ 54 ಸೈಕಲ್ ವಿತರಣೆ ಹಾಗೂ ಅಗತ್ಯ ಲೇಖನ ಪರಿಕರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಗುರಿ ಸಾಧನೆಗೆ ಏಕಾಗ್ರತೆ ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಸಾಧನೆ ಮಾಡುವ ಮೂಲಕ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯವಾಗಲಿದೆ ಎಂದರು.


ರೋಟರಿ ಸಂಸ್ಥೆ ಹಲವಾರು ವರ್ಷಗಳಿಂದಲೂ ನಿರಂತರವಾಗಿ ಸಮಾಜದ ಅಭಿವೃದ್ಧಿಗೆ ಮತ್ತು ಗ್ರಾಮೀಣ ಭಾಗದ ಜನರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದರು.


ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅಗಾಧವಾದ ಪ್ರತಿಭೆ ಇದ್ದು, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವ್ಯಕ್ತಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರಿಯ ಮಟ್ಟದಲ್ಲಿ ಮಹತ್ತರವಾದ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಗ್ರಾಪಂ ಮಾಜಿ ಅಧ್ಯಕ್ಷ ಶಂಕರೇಗೌಡ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲಾ ಒಂದು ರೀತಿಯಲ್ಲಿ ಪ್ರತಿಭೆಯಿದ್ದು, ಅದನ್ನು ಹೊರತರಲು ಪಾಲಕರು ಮತ್ತು ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಉನ್ನತ ಸ್ಥಾನವನ್ನು ಅಲಂಕರಿಸಿದ ನಂತರ ಸರ್ಕಾರಿ ಶಾಲೆಗಳ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.


ರೋಟರಿ ಸಂಸ್ಥೆಯ ಯೂತ್ ನಿರ್ದೇಶಕಿ ಲಿಖಿತಾ ಸುದರ್ಶನ್ ಮಾತನಾಡಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬೈಸಿಕಲ್ ಹಾಗೂ ಅಗತ್ಯ ಪರಿಕರಗಳನ್ನು ವಿತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸೋಲಾರ್ ದೀಪಗಳ ವಿತರಣೆ, ಶೌಚಗೃಹ ವ್ಯವಸ್ಥೆ ಕಲ್ಪಿಸುವ ಜತೆಗೆ, ಆರೋಗ್ಯ ಶಿಬಿರ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಹೇಳಿದರು.


ಗ್ರಾಪಂ ಸದಸ್ಯ ಪ್ರಸಾದ್, ಮಾಜಿ ಅಧ್ಯಕ್ಷ ಶಂಕರೇಗೌಡ, ಸದಸ್ಯೆ ನಾಗರತ್ನ ಶಂಕರೇಗೌಡ, ತಾಪಂ ಮಾಜಿ ಸದಸ್ಯ ಬಿಳಿಯಪ್ಪ, ಬೆಂಗಳೂರು ರೋಟರಿ ಸಂಸ್ಥೆ ಅಧ್ಯಕ್ಷ ಎಚ್.ಎಂ.ಟಿ.ಗೌಡ, ಕ್ಷೇತ್ರ ಸಮನ್ವಯ ಅಧಿಕಾರಿ ಹನುಮಶೆಟ್ಟಿ, ಸಿಆರ್‌ಪಿ ಮಹದೇವಸ್ವಾಮಿ, ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಹೇಮೇಗೌಡ, ಹೇಮಾಮಾಲಿನಿ, ಕುಮಾರಸ್ವಾಮಿ, ಬೆಟ್ಟಸ್ವಾಮಿ, ಪ್ರಸಾದ್ ಕುಮಾರ್, ರಾಜು, ಅಕ್ಷರಂ ವೆಂಕಟೇಶ್, ಎಸ್‌ಡಿಎಂಸಿ ಅಧ್ಯಕ್ಷ ಕೆಂಪರಾಜು, ಮುಖ್ಯಶಿಕ್ಷಕ ಪ್ರಕೃದ್ದೀನ್‌ಸಾಬ್, ಗಿರಿಗೌಡನ ದೊಡ್ಡಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net