ಸಭೆಗೆ ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮ

IMG-20231008-WA0232
Published on

ಆಲೂರು: ತಾ.ಪಂ. ಸಾಮಾನ್ಯ ಸಭೆಗೆ ಪದೇಪದೆ ಗೈರಾಗುತ್ತಿರುವ ಅಧಿಕಾರಿಗಳು ಇನ್ನು ಮುಂದೆ ನೋಟಿಸ್ ನೀಡುವ ಬದಲು ನೇರವಾಗಿ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಎಚ್ಚರಿಸಿದರು.


ಪಟ್ಟಣದ ತಾಪಂ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಇಲಾಖೆಗಳು ಮುಖ್ಯಸ್ಥರು ಸಭೆಗೆ ಹಾಜರಾಗದೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ತಳಮಟ್ಟದ ಅಧಿಕಾರಿಗಳನ್ನು ಸಭೆಗೆ ಕಳುಹಿಸುತ್ತಾರೆ. ಅವರು ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರ ನೀಡದೆ ತಡವರಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಕಳೆದ 8-10 ದಿನಗಳ ಹಿಂದೆಯೇ ಸಭೆ ನಿಗದಿಯಾಗಿರುತ್ತದೆ. ಅದರೆ ಯಾವುದೇ ಮಾಹಿತಿ ಇಲ್ಲದೆ ಸಭೆಗೆ ಅಧಿಕಾರಿಗಳು ಬರುವುದು ತರವಲ್ಲ. ಮುಂದಿನ ಸಭೆಯಲ್ಲಿ ಸಂಪೂರ್ಣ ಮಾಹಿತಿಯೊಂದಿಗೆ ಇಲಾಖೆ ಮುಖ್ಯಸ್ಥರೇ ಸಭೆಗೆ ಹಾಜರಾಗಬೇಕು ಎಂದು ತಾಕೀತು ಮಾಡಿದರು.


ಸಭೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ವೈದ್ಯರು, ಮಕ್ಕಳ ತಜ್ಞರು, ಹಾಗೂ ಕೆ.ಹೊಸಕೋಟೆ ಆಸ್ಪತ್ರೆಗೆ ವೈದ್ಯರ ಕೊರತೆ ಇದ್ದು, ಆಸ್ಪತ್ರೆಗಳಲ್ಲಿ ಮೂಲಸೌಕರ್ಯದ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಕೆಲವು ವೈದ್ಯರು ಖಾಸಗಿ ಮೆಡಿಕಲ್ ಶಾಪ್‌ಗಳಿಗೆ ಚೀಟಿ ಬರೆದುಕೊಡುತ್ತಿರುವ ಬಗ್ಗೆ ದೂರುಗಳಿವೆಯಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಜಯರಾಜ್ ಅವರನ್ನು ಪ್ರಶ್ನಿಸಿದ ಶಾಸಕರು, ಆರೋಗ್ಯ ಮಂತ್ರಿಗಳನ್ನು ಭೇಟಿ ಮಾಡಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.


ತಾಲೂಕಿನಲ್ಲಿ ಡಯಾಲಿಸಿಸ್ ರೋಗಿಗಳು ಹಾನಸ, ಇತರ ತಾಲೂಕು ಆಸ್ಪತ್ರೆಗಳಿಗೆ ಅಲೆಯುವಂತಾಗಿದೆ. ಈ ಸಮಸ್ಯೆ ಬಗೆಹರಿಸಲು ಸ್ಥಳ ನಿಗದಿ ಮಾಡಿ ಸದ್ಯಕ್ಕೆ ಎರಡು ಡಯಾಲಿಸಿಸ್ ಯಂತ್ರ ಹಾಗೂ ಅಗತ್ಯ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಶಾಸಕರು ತಿಳಿಸಿದರು.


ಗ್ರಾಮೀಣ ಭಾಗದಲ್ಲಿ ಏಷ್ಟೋ ರೈತರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಇಲ್ಲ. ಇದರಿಂದ ಮಧ್ಯವರ್ತಿಗಳು ರೈತರನ್ನು ವಂಚಿಸುತ್ತಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಮನೆ ಹಾಗೂ ಜಮೀನುಗಳಿಗೆ ನೇರವಾಗಿ ತೆರಳಿ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು. ಜತೆಗೆ ಗ್ರಾಮ ಪಂಚಾಯಿತಿ, ಹೋಬಳಿ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶಾಸಕರು ತಾಕೀತು ಮಾಡಿದರು.


ಸಭೆಯಲ್ಲಿ ತಾಪಂ ಆಡಳಿತಾಧಿಕಾರಿ ತಬ್ಜಲ್ ಹುಸೇನ್, ಕಾರ್ಯನಿರ್ವಹಣಾಧಿಕಾರಿ ದಯಾನಂದ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net