

ಮೈಸೂರು ನಗರ, ಹೊರವಲಯದ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಬಡಾವಣೆಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸದೆ ಇರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಖಾಸಗಿ ಬಡಾವಣೆಗಳನ್ನು ರಚನೆ ಮಾಡಿದವರು, ಮೂಲಸೌಕರ್ಯಗಳನ್ನು ಒದಗಿಸದಿದ್ದಲ್ಲಿ ಎನ್‌ಒಸಿ ಏಕೆ ಕೊಡಬೇಕು? ಸರ್ಕಾರದಿಂದ ನೀಡುವ ಹಣವನ್ನು ಸರಿಯಾಗಿ ಬಳಸಿಕೊಳ್ಳದಿದ್ದಲ್ಲಿ ಯಾವ ಅಭಿವೃದ್ಧಿಯೂ ಆಗುವುದಿಲ್ಲ ಎಂದರು.
ಕೆಡಿಪಿ ಸಭೆಯಲ್ಲಿ ಸಿಎಂ ಭಾಗಿ: ಜಿಲ್ಲೆಯಲ್ಲಿ ಸಮರ್ಪಕವಾಗಿ ನೀರು ನೀಡುವುದು, ಯುಜಿಡಿ ಸಮಸ್ಯೆ, ಕುಡಿಯುವ ನೀರು ನಿರ್ವಹಣೆ, ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೆರೆಕಟ್ಟೆಗಳನ್ನು ದುರಸ್ತಿಪಡಿಸುವುದು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಗಸ್ಟ್ ಅಂತ್ಯಕ್ಕೆ ಅಥವಾ ಸೆಪ್ಟಂಬರ್ ಮೊದಲ ವಾರ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಆದ್ದರಿಂದ ನಗರದಲ್ಲಿ ಕಾಡುತ್ತಿರುವ ಹಲವಾರು ಸಮಸ್ಯೆಗಳು ಮತ್ತು ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಅನುದಾನ ಕುರಿತು ಇಲಾಖಾವಾರು ಪಟ್ಟಿ ಮಾಡಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೈಸೂರನ್ನು ಸ್ವಚ್ಛ ನಗರಿ ಎಂದು ಹೇಳುತ್ತೇವೆ. ಈ ನಿಟ್ಟಿನಲ್ಲಿ ಸ್ವಚ್ಛತೆಯ ನಿರ್ವಹಣೆ ಮಾರ್ಗ ಸರಿಯಾಗಿರಬೇಕು. ದಸರಾ ಮಹೋತ್ಸವಕ್ಕೂ ಮುನ್ನ ಹಲವು ಸಮಸ್ಯೆಗಳನ್ನು ಪರಿಹರಿಸಲು ಜನಪ್ರತಿನಿಧಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಲಾಗುವುದು. ನಗರಪಾಲಿಕೆ, ಮುಡಾ ಮೊದಲಾದ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಕೆಲಸ, ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಸಲ್ಲಿಸಬೇಕು. ಮತ್ತೊಂದು ಬಾರಿ ಪರಿಶೀಲಿಸಿದ ಮೇಲೆ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಸಮಿತಿ ರಚನೆ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ ಮಾಡಲು ಸೂಚನೆ ನೀಡಿದ ಸಚಿವರು, ಮುಡಾ, ನಗರಪಾಲಿಕೆ, ಲೋಕೋಪಯೋಗಿ, ಸಣ್ಣ ನೀರಾವರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ, ಸೆಸ್ಕ್ ಮೊದಲಾದ ಇಲಾಖೆಗಳ ಅಧಿಕಾರಿಗಳು ಸದಸ್ಯರಾಗಿರಬೇಕು. ಮೂರು ತಿಂಗಳಿಗೊಮ್ಮೆ ಸಭೆ ಸೇರಿ ನಗರದ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕಲ್ಪಿಸುವ ಹಾಗೂ ಇತ್ಯರ್ಥಪಡಿಸುವ ಬಗ್ಗೆ ಪರಿಶೀಲಿಸಬೇಕು. ಈ ಸಭೆಯಲ್ಲಿ ಚರ್ಚೆಯಾಗಿ ಸರ್ಕಾರದ ಹಂತದಲ್ಲಿ ತೀರ್ಮಾನ ಮಾಡುವಂಥದ್ದನ್ನು ನನ್ನ ಗಮನಕ್ಕೆ ತರಬೇಕು ಎಂದು ಹೇಳಿದರು.
ನಗರದ ಯುಜಿಡಿ ಸಮಸ್ಯೆಯನ್ನು ಇತ್ಯರ್ಥಪಡಿಸುವ ಸಂಬಂಧ ಘನತ್ಯಾಜ್ಯ ನೀರು ನಿರ್ವಹಣಾ ಘಟಕಕ್ಕೆ ಸೇರದೆ ರಾಜಕಾಲುವೆ, ಮೋರಿಗಳಿಗೆ ಹರಿದುಹೋಗುವುದನ್ನು ಗುರುತಿಸುವುದು, ಲಿಂಕ್ ಮಾಡಿರುವುದನ್ನು ಪತ್ತೆ ಹಚ್ಚುವುದರ ಜತೆಗೆ ಯುಜಿಡಿ ನೀರು ನೇರವಾಗಿ ಎಸ್‌ಟಿಪಿ ಪ್ಲಾಂಟ್‌ಗೆ ಸೇರುವಂತೆ ಮಾಡಲು ಡಿಪಿಆರ್ ತಯಾರು ಮಾಡಿ ಸಲ್ಲಿಸುವಂತೆ ನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಮುಡಾ ಆಯುಕ್ತ ದಿನೇಶ್ ಕುಮಾರ್ ಇತರರು ಇದ್ದರು.