

ಗೋಣಿಕೊಪ್ಪ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 8 ಹೋಬಳಿ ಕೇಂದ್ರದ ಶಾಲಾ ಆಟದ ಮೈದಾನಗಳನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ತಲಾ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಬಿಇಒ ಕಚೇರಿಗಳ ಸಹಯೋಗದಲ್ಲಿ ಹುದಿಕೇರಿಯ ಜನತಾ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 8 ಹೋಬಳಿಯ ಶಾಲಾ ಆಟದ ಮೈದಾನಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಈಗಾಗಲೇ ವಿರಾಜಪೇಟೆ ಮತ್ತು ಹುದಿಕೇರಿಯಲ್ಲಿ ಕಾಮಗಾರಿ ನಡೆದಿದೆ. ಉಳಿದ 6 ಆಟದ ಮೈದಾನದ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಕೊಡಗು ಜಿಲ್ಲೆ ಹಾಕಿ, ಕ್ರಿಕೆಟ್ ಹಾಗೂ ಅಥ್ಲೆಟಿಕ್ಸ್‌ನಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಮೂಲಸೌಲಭ್ಯ ಕಲ್ಪಿಸಲು ಗಮನ ನೀಡಲಾಗಿದೆ ಎಂದರು.
ಜಿಲ್ಲೆಯ ಕ್ರೀಡಾ ಪರಂಪರೆಯನ್ನು ಮತ್ತಷ್ಟು ಔನ್ನತ್ಯಕ್ಕೆ ಕೊಂಡೊಯ್ಯುವಂತಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಹೇಳಿದರು.
ಹುದಿಕೇರಿ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ರಾಜಕೀಯ, ಕ್ರೀಡೆ ಸೇರಿದಂತೆ ವಿವಿಧ ಕೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ ಎಂದು ಎ.ಎಸ್.ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಬಿ.ಆರ್.ಗಾಯತ್ರಿ ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ವಿವಿಧ ರಂಗದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಹುದಿಕೇರಿ ಜನತಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಂ.ಎಂ.ಅಶೋಕ್ ಮಾತನಾಡಿದರು. ಹುದಿಕೇರಿ ಗ್ರಾಪಂ ಅಧ್ಯಕ್ಷ ಕುಪ್ಪಣಮಾಡ ನಿವ್ಯ ಕಾವೇರಮ್ಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಬಿಇಒ ಡಾ.ಆರ್.ರವಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎ.ಪ್ರವೀಣ್, ಜಿಲ್ಲಾ ಅನುದಾನಿತ ಶಾಲಾ-ಕಾಲೇಜು ನೌಕರರ ಸಂಘದ ಅಧ್ಯಕ್ಷ ಪಿ.ಎ.ಪ್ರಭುಕುಮಾರ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸದಾಶಿವ ಪಲ್ಲೇದ್, ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಎಚ್.ಎನ್.ಪಾರ್ವತಿ, ವಿರಾಜಪೇಟೆ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಪಿ.ಮಹೇಶ್, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಚೈತನ್ಯ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಇ.ಸುರೇಂದ್ರ, ಅನುದಾನಿತ ಪ್ರೌಢಶಾಲಾ ಹಾಗೂ ಕಾಲೇಜು ನೌಕರರ ಸಂಘದ ಅಧ್ಯ ಜಿ.ಗಿಡ್ಡಯ್ಯ, ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಾ.ಸೋಮಯ್ಯ, ಎಂ.ಎಸ್.ತಮ್ಮಯ್ಯ, ಪಿ.ಎಂ.ಕಿರಣ್, ಕೆ.ಜಿ.ಅಶೋಕ್, ಟಿ.ಎಸ್.ಮಹೇಶ್, ಹುದಿಕೇರಿ ಜನತಾ ಪ್ರೌಢ ಶಾಲೆ ಆಡಳಿತ ಮಂಡಳಿ ಕಾರ್ಯದರ್ಶಿ ಅಜ್ಜಿಕುಟ್ಟಿರ ಜಿ.ಗಣೇಶ್, ಹುದಿಕೇರಿ ಜನತಾ ಪ್ರೌಢಶಾಲೆ ಮುಖ್ಯಶಿಕ್ಷಕಿ ಸಿ.ಕೆ.ಮೋಹನ್ ಕುಮಾರಿ, ಹುದಿಕೇರಿ ಜನತಾ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸಿ.ವಿ.ಸುಬ್ರಮಣಿ ಇತರರು ಇದ್ದರು.