ವಸತಿ ರಹಿತರಿಗೆ ನಿವೇಶನಕ್ಕೆ ಕ್ರಮ: ವರ್ಣಿತ್ ನೇಗಿ

MDK10
Published on

ಮಡಿಕೇರಿ: ಜಿಲ್ಲೆಯ ವಿವಿಧ ಗ್ರಾ.ಪಂ.ವ್ಯಾಪ್ತಿಗಳಲ್ಲಿ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಮತ್ತು ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಹೇಳಿದರು.


ಜಿಲ್ಲಾಧಿಕಾರಿ ವೆಂಕಟ ರಾಜಾರವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ(ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.


ನಿವೇಶನ ಹಾಗೂ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಆ ನಿಟ್ಟಿನಲ್ಲಿ ಆಯಾಯ ಗ್ರಾ.ಪಂ. ವ್ಯಾಪ್ತಿಗೆ ಪಟ್ಟಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.


ಬಳಿಕ ಸಫಾಯಿ ಕರ್ಮಚಾರಿ ಸಂಬಂಧಿಸಿದಂತೆ ಮಾಹಿತಿ ಪಡೆದ ಅವರು, ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳನ್ನು ಖಾಯಂ ಮಾಡುವ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.


ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ರಂಗಸ್ವಾಮಿ ಮಾತನಾಡಿ, ಸಫಾಯಿ ಕರ್ಮಚಾರಿಗಳಿಗೆ ಕನಿಷ್ಠ ವೇತನ ನೀಡಬೇಕು. ಜತೆಗೆ ೨೦-೩೦ ವರ್ಷಗಳಿಂದ ಗ್ರಾ.ಪಂ.ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳನ್ನು ಖಾಯಂ ಮಾಡಬೇಕು. ನಿವೇಶನ ರಹಿತರಿಗೆ ನಿವೇಶನ ನೀಡುವುದು. ಜೊತೆಗೆ ಮನೆ ನಿರ್ಮಿಸಬೇಕು ಎಂದು ಕೋರಿದರು.


ಸಫಾಯಿ ಕರ್ಮಚಾರಿಗಳಿಗೆ ಸಮಾನ ಕ್ಷೇತ್ರಕ್ಕೆ ಸಮಾನ ವೇತನ ನೀಡುವಂತಾಗಬೇಕು. ಸಫಾಯಿ ಕರ್ಮಚಾರಿಗಳು ಸೇರಿದಂತೆ ಎಲ್ಲರಿಗೂ ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದು ಪಳನಿ ಪ್ರಕಾಶ್ ಅವರು ಗಮನ ಸೆಳೆದರು.


ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್‌ ಸಂಬಂಧಿಸಿದಂತೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಪುನರ್‌ವಸತಿ ಕಲ್ಪಿಸಬೇಕಿದೆ. ಗುರುತಿನ ಚೀಟಿ ನೀಡುವುದು, ಶಾಲಾ-ಕಾಲೇಜು ಪ್ರವೇಶಕ್ಕೆ ಉಚಿತ ಅವಕಾಶ ಕಲ್ಪಿಸುವುದು, ಶಿಷ್ಯವೇತನ ಪಾವತಿಸುವುದು, ಸಫಾಯಿ ಕರ್ಮಚಾರಿ ಕುಟುಖಬದ ಮಕ್ಕಳ ವಿದ್ಯಾಭ್ಯಾಸ ಸಂಬಂಧ ಪ್ರವೇಶ ಪರೀಕ್ಷೆ ಇಲ್ಲದೆ ವಸತಿ ಶಾಲೆಗಳ ಪ್ರವೇಶಕ್ಕೆ ಅವಕಾಶ ಮಾಡುವುದು. ಗ್ರಾಮೀಣ ಪ್ರದೇಶದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮತ್ತು ಪಟ್ಟಣ/ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅವಕಾಶ ಮಾಡುವುದು. ಮತ್ತಿತರ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಒದಗಿಸಬೇಕಿದೆ ಎಂದು ಮಾಹಿತಿ ನೀಡಿದರು.


ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ಸಫಾಯಿ ಕರ್ಮಚಾರಿಗಳಿಗೆ ಕಾನೂನು ನೆರವು ನೀಡುವುದರ ಜತೆಗೆ, ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕಿದೆ ಎಂದು ಹೇಳಿದರು.


ಸದಸ್ಯ ಎಚ್.ಎಸ್.ಮುತ್ತಪ್ಪ ಮಾತನಾಡಿ, ಐಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಪರಿಶಿಷ್ಟರು ವಾಸಿಸುವ ಗ್ರಾಮಗಳಿಗೆ ಕುಡಿಯುವ ನೀರು ಸಂಪರ್ಕ, ತಡೆಗೋಡೆ ನಿರ್ಮಾಣ, ಹೀಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಕೋರಿದರು.


ಸಮಿತಿ ಸದಸ್ಯ ಪಳನಿ ಪ್ರಕಾಶ್ ಮಾತನಾಡಿ, ಜಿಲ್ಲೆಯ ವಿವಿಧ ಕಡೆಗಳಲ್ಲಿ ವಾಸಮಾಡುವ ಪರಿಶಿಷ್ಟರಿಗೆ ಭೂಮಿ ಸಂಬಂಧ ನಿವೇಶನ ಹಕ್ಕು ಪತ್ರ ಇಲ್ಲದವರಿಗೆ ನಿವೇಶನ ಹಕ್ಕುಪತ್ರ ನೀಡುವಂತಾಗಬೇಕು. ಇದರಿಂದ ಕುಡಿಯುವ ನೀರು, ವಿದ್ಯುತ್, ರಸ್ತೆ, ಅಂಗನವಾಡಿ ಮತ್ತಿತರ ಮೂಲ ಸೌಲಭ್ಯ ಪಡೆಯಲು ಸಾಧ್ಯ. ಇಂತಹ ಬಡಾವಣೆಗಳನ್ನು ಗುರುತಿಸಿ ನಿವೇಶನ ಹಕ್ಕು ಪತ್ರ ನೀಡುವಂತಾಗಬೇಕು ಎಂದು ಮನವಿ ಮಾಡಿದ ಅವರು, ೯೪ಸಿ ಮತ್ತು ೯೪ಸಿಸಿರಡಿ ಹಾಗೂ ನಮೂನೆ ೫೭ ರಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ, ಆರ್‌ಟಿಸಿ ವಿತರಿಸುವಂತಾಗಬೇಕು ಎಂದು ಕೋರಿದರು.


ಸದಸ್ಯ ಜಾಯ್ಸ ಮೆನೇಜಸ್ ಮಾತನಾಡಿ, ಬಾಳೆಗುಂಡಿಯಲ್ಲಿ ೯೫ ಕುಟುಂಬಗಳು ವಾಸಮಾಡುತ್ತಿದ್ದು, ಈ ಕುಟುಂಬಗಳಿಗೆ ಪಡಿತರ ಚೀಟಿ ಒದಗಿಸುವಂತಾಗಬೇಕು ಎಂದರು.


ಸದಸ್ಯ ಪಿ.ಪಿ.ಸುಕುಮಾರ್ ಮಾತನಾಡಿ, ಪರಿಶಿಷ್ಟ ಕುಟುಂಬಗಳಿಗೆ ಹಲವು ಮೂಲಸೌಲಭ್ಯಗಳು ದೊರೆಯಬೇಕಿದ್ದು, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಯಬೇಕು ಎಂದರು.


ಜಿಲ್ಲಾಧಿಕಾರಿ ವೆಂಕಟ ರಾಜಾ ಮಾತನಾಡಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗೆ ಸಮಿತಿ ಸದಸ್ಯರು ನೀಡಿರುವ ಹಲವು ಸಲಹೆಗಳನ್ನು ಪರಿಗಣಿಸಿ, ತ್ವರಿತ ಇತ್ಯರ್ಥಕ್ಕೆ ಇಲಾಖೆಗಳು ಆದ್ಯತೆ ಮೇಲೆ ಗಮನಹರಿಸಬೇಕು. ಸಕಾಲದಲ್ಲಿ ಸ್ಪಂದಿಸುವಂತಾಗಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net