ಪಿಒಪಿ ಗಣೇಶ ವಿಗ್ರಹ ಮಾರಾಟ ಮಾಡಿದಲ್ಲಿ ಕ್ರಮ

Action if POP Ganesha idol is sold
ಜಾನಕಿ ಕೆ.ಎಂ.
Published on

ಬಾಗಲಕೋಟೆ: ಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ಲಾಸ್ಟರ್ ಆ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಕೆರೆ ಮತ್ತು ಇತರ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳನ್ನು ಮಾರಾಟ ಮತ್ತು ತಯಾರಿಸುವವರ ವಿರುದ್ಧ್ದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಉಚ್ಚ ನ್ಯಾಯಾಲಯದ ಆದೇಶದನ್ವಯ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆ್ ಪ್ಯಾರಿಸ್, ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಸಿದಲ್ಲಿ ಐಪಿಸಿ ಸೆಕ್ಷನ್ 1860ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ವಿಗ್ರಹ ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ಲೈಸೆನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೆ ಅನಧಿಕೃತವಾಗಿ ತಯಾರಿ, ಮಾರಾಟ ಮಾಡಿದಲ್ಲಿ ವ್ಯಕ್ತಿ, ಸಂಸ್ಥೆಗಳ ಮೇಲೆ ಕ್ರಮ ಜರುಗಿಸಲಾಗುತ್ತದೆ.

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿದ ಸ್ಥಳಗಳಲ್ಲಿ ವಿಸರ್ಜನೆ ಮಾಡಬೇಕು. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕರ್, ಕಲ್ಯಾಣಿಗಳ ಪಕ್ಕದಲ್ಲಿ ಹೂ, ಹಣ್ಣು, ಬಾಳೆ, ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಿ ಮೂರ್ತಿಗಳನ್ನು ಮಾತ್ರ ವಿಸರ್ಜಿಸಲು ಅವಕಾಶ ನೀಡಲಾಗುತ್ತದೆ.

ಸಾರ್ವಜನಿಕವಾಗಿ ಇಡಲಾದ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರಯ ಕಡ್ಡಾಯವಾಗಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದ ನಂತರವೇ ಸ್ಥಾಪಿಸಬೇಕು. ಪ್ಲಾಸ್ಟರ್ ಆಪ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ಸುಪರ್ದಿಗೆ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಜಿಲ್ಲೆ ಮತ್ತು ತಾಲೂಕುಗಳಿಗೆ ಬೇರೆ ಸ್ಥಳಗಳಿಂದ ಬರುವಂತಹ ಪಿಒಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್ ಪೋಸ್ಟ್ ಅಧಿಕಾರಿಗಳು ಸೂಕ್ತ ಕ್ರಮ ವಹಿಸಲು ತಿಳಿಸಲಾಗಿದೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಏಳು ದಿನಗಳಿಗೆ ಮೀರದಂತೆ ನಿರಂತರ ಬಳಕೆಗೆ ಧ್ವನಿವರ್ಧಕ, ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟು ಮಾಡುವ ಉಪಕರಣಗಳನ್ನು ಬಳಸಲು ಪೊಲೀಸ್ ಇಲಾಖೆಯಿಂದ ಪರವಾನಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ಕ್ರಮ

ಸರ್ಕಾರ ಈಗಾಗಲೇ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಲೂನ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರಿನ್‌ಗಳನ್ನು ಬಳಸುವಂತಿಲ್ಲ. ಎಲ್ಲ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಧ್ವಜ, ಅಂಟಿಕೊಳ್ಳುವ ಫಿಲ್ಮ್, ಡೈನಿಂಗ್ ಟೇಬಲ್ ಮೇಲೆ ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್, ಕಪ್ ಮತ್ತು ಲೋಟ್‌ಗಳು, ಪೋರ್ಕಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಟ್ರೇಗಳು, ಬಾಕ್ಸ್‌ಗಳು, ಆಮಂತ್ರಣ ಪತ್ರಗಳು, ಸಿಗರೇಟ್ ಪ್ಯಾಕೆಟ್‌ಗಳ ಸುತ್ತ ಸುತ್ತುವ ಪದರು ಅಥವಾ ಪ್ಯಾಕಿಂಗ್ ಫಿಲ್ಮ್‌ಗಳು ನಿಷೇಧಿತವಾಗಿರುವ ಹಿನ್ನೆಲೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಅವುಗಳ ಬಳಕೆ ಆಗದಂತೆ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾವಹಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net