ಕಾಮಗಾರಿ ವಿಳಂಬವಾದರೆ ಕ್ರಮ

Screenshot_2024-08-21-22-10-14-71.jpg
Published on

ಬೆಳಗಾವಿ: ಜಿಲ್ಲೆಯಲ್ಲಿ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಿಸಿದ ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಸೂಚಿಸಿದರು.

ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕೇಂದ್ರ ಕಚೇರಿಯಿಂದ ಬೆಳಗಾವಿ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಸಮನ್ವಯ ಸಭೆಯ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಡಿ ನಾಲ್ಕು ಹಾಗೂ ಚಿಕ್ಕೋಡಿ ವಿಭಾಗದಲ್ಲಿ ಒಟ್ಟು 9 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪ್ರಗತಿಯಲ್ಲಿವೆ. ಈ ಯೋಜನೆಗಳ ನಕ್ಷೆ ಹಾಗೂ ವಿನ್ಯಾಸಗಳಲ್ಲಿ ವಿಳಂಬ ಆಗದಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದರು.

ಯೋಜನೆಗಳ ಅನುಷ್ಠಾನದಿಂದ ಬೆಳಗಾವಿ ಜಿಲ್ಲೆಯನ್ನು ಟ್ಯಾಂಕರ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕಾರಿಯಾಗುವುದಲ್ಲದೆ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಥಣಿ, ರಾಯಬಾಗ, ಚಿಕ್ಕೋಡಿ ತಾಲೂಕುಗಳಿಗೆ ಅನುಕೂಲವಾಗಲಿದೆ. ಈ ಯೋಜನೆಗಳ ನಕ್ಷೆ ಮತ್ತು ವಿನ್ಯಾಸಗಳ ಅನುಮೋದನೆ ಆದ್ಯತೆ ಮೇಲೆ ನೀಡುವಂತೆ ಮನವಿ ಮಾಡಿದರು.

ಅದಕ್ಕೆ ಸ್ಪಂದಿಸಿದ ನಾಗೇಂದ್ರ ಪ್ರಸಾದ್, ಸಂಬಂಧಿಸಿದ ಪಿ.ಎಂ.ಯು/ಪಿ.ಎಂ.ಸಿ ಹಾಗೂ ಗುತ್ತಿಗೆದಾರರಿಗೆ ಕಾಲಬದ್ಧ ಅನುಮೋದನೆ ಪಡೆಯಲು ಸೂಚಿಸಿದರು. ಇಲಾಖೆ ಮುಖ್ಯ ಇಂಜಿನಿಯರ್ ಇಜಾಜ್ ಹುಸೇನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೆಳಗಾವಿ, ಚಿಕ್ಕೋಡಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net