ಕಲುಷಿತ ನೀರು ಪೂರೈಕೆಯಾದರೆ ಕ್ರಮ; ಅಧಿಕಾರಿಗಳಿಗೆ ಸಿಇಒ ರಿಷಿ ಆನಂದ ಎಚ್ಚರಿಕೆ

ZP CS VISIT TALIKOTI
ತಾಳಿಕೋಟಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಸಿಇಒ ರಿಷಿ ಆನಂದ ಕುಡಿಯುವ ನೀರಿನ ಶುದ್ಧತೆ ಪರಿಶೀಲಿಸಿದರು. ಇಒ ಬಿ.ಆರ್. ಬಿರಾದಾರ, ಅರುಣಕುಮಾರ ದಳವಾಯಿ, ರಾಜಶೇಖರ ಎಸ್. ಹಿರೇಗೌಡರ ಮತ್ತಿತರರಿದ್ದಾರೆ.
Published on

ವಿಜಯಪುರ: ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸುವ ಮುನ್ನ ಗುಣಮಟ್ಟ ಪರೀಕ್ಷಿಸಬೇಕು. ಕಲುಷಿತ ನೀರು ಪೂರೈಕೆಯಾದಲ್ಲಿ ಪಿಡಿಒ, ಇಒ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಪಂ ಸಿಇಒ ರಿಷಿ ಆನಂದ ತಿಳಿಸಿದರು.

ಬುಧವಾರ ತಾಳಿಕೋಟಿ ತಾಲೂಕಿನ ನಾವದಗಿ, ಮಿಣಜಗಿ ಗ್ರಾಮಗಳಲ್ಲಿ ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಂಟಾಗಿ ಜನರು ಅಸ್ವಸ್ಥಗೊಂಡ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.

ನಾವದಗಿ ಮತ್ತು ಮಿಣಜಗಿ ಗ್ರಾಮಗಳಲ್ಲಿನ ಕುಡಿಯುವ ನೀರಿನ ಬೋರವೆಲ್, ಬಾವಿಗಳು, ಓವರ್ ಹೆಡ್ ಟ್ಯಾಂಕ್ ಮತ್ತು ಗ್ರಾಮಗಳಲ್ಲಿನ ಚರಂಡಿಗಳನ್ನು ವೀಕ್ಷಣೆ ಮಾಡಿ, ಕುಡಿಯುವ ನೀರಿನ ಮೂಲಗಳ ಸುತ್ತ-ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಗ್ರಾಮಗಳಲ್ಲಿನ ಚರಂಡಿಗಳನ್ನು ಪ್ರತಿದಿನ ಸ್ವಚ್ಛಗೊಳಿಸುವುದು, ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳನ್ನು ಬಂದ್ ಮಾಡಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವುದು, ನಿರಂತರವಾಗಿ ನೀರಿನ ಗುಣಮಟ್ಟ ಪರೀಕ್ಷೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಸರಬರಾಜು ಮಾಡುವ ಮೊದಲು ಕಡ್ಡಾಯವಾಗಿ ನೀರಿನ ಗುಣಮಟ್ಟದ ಬಗ್ಗೆ ಪರೀಕ್ಷಿಸಬೇಕು. ಒಂದು ವೇಳೆ ನೀರು ಕುಡಿಯಲು ಯೋಗ್ಯವಾಗಿಲ್ಲದಿದ್ದರೆ ತಕ್ಷಣ ಅಂತಹ ನೀರನ್ನು ಸರಬರಾಜು ಮಾಡುವುದನ್ನು ನಿಲ್ಲಿಸಿ ತುರ್ತಾಗಿ ಮುಂದಿನ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ತಾಳಿಕೋಟಿ ತಾಲೂಕಿನ ಕೊಡಗಾನೂರ ಗ್ರಾಮ ಪಂಚಾಯಿತಿಯ ನಾವದಗಿ ಮತ್ತು ಮಿಣಜಗಿ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಕುರಿತು ಪರಿಶೀಲನೆ ನಡೆಸಿದರು.

ಸಾರ್ವಜನಿಕ ಬಾವಿಗಳ ಸುತ್ತ ತಂತಿ ಬೇಲಿ ಅಳವಡಿಸಬೇಕು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಬೇಕು, ಸಾರ್ವಜನಿಕರಿಗೆ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಸಂಬಂಧಪಟ್ಟ ಪಿಡಿಒಗೆ ಸೂಚಿಸಿದರು.

ತಾಳಿಕೋಟಿ ತಾಪಂ ಕಾರ್ಯಾಲಯದಲ್ಲಿ ತಾಲೂಕಿನ ಎಲ್ಲ ಪಿಡಿಒಗಳ ಸಭೆ ನಡೆಸಿದ ಅವರು, ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಗ್ರಾಮಗಳಲ್ಲಿ ಯಾವುದೇ ತೊಂದರೆಗಳು ಹಾಗೂ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳುವುದು, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಲೋಪದೋಷಗಳು ಕಂಡು ಬಂದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರನ್ನು ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಂತರ, ತಾಳಿಕೋಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಕುರಿತು ವಿಚಾರಿಸಿದರು. ಆಸ್ಪತ್ರೆಯ ಮೂಲ ಸೌಕರ್ಯಗಳ ಕುರಿತು ಪರಿಶೀಲಿಸಿದರು.

ಇಒ ಬಿ.ಆರ್. ಬಿರಾದಾರ, ಜಿಪಂ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜಶೇಖರ ಎಸ್. ಹಿರೇಗೌಡರ, ತಾಲೂಕು ಆರೋಗ್ಯ ಅಧಿಕಾರಿ ಡಾ. ಸತೀಶ ತಿವಾರಿ, ಕಾರಗನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯದಾಧಿಕಾರಿ ಡಾ.ಸುನೀಲ ಹಿರೇಗೌಡರ, ಡಾ. ವಿಜಯಲಕ್ಷ್ಮಿ, ಡಾ. ಕವಿತಾ ದೊಡಮನಿ, ತಾಳಿಕೊಟಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀಶೈಲ ಹುಕ್ಕೇರಿ, ಕೊಡಗಾನೂರ ಪಿಡಿಒ ಅನೀಲಕುಮಾರ ಕೀರಣಗಿ, ಮಿಣಜಗಿ ಪಿಡಿಒ ಬಿ. ಎಂ. ಸಾಗರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net