ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ವೈದ್ಯರ ನೇಮಕಕ್ಕೆ ಕ್ರಮ

Health minister public hearing
Published on

ಕಾರವಾರ:  ರಾಜ್ಯದಲ್ಲಿ ಖಾಲಿ ಇರುವ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸಲಿಂಗ್ ಆರಂಭವಾಗಲಿದ್ದು, ಖಾಲಿ ಇರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಅವರು ಬುಧವಾರ ಕಾರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ಕೊರತೆ ಇರುವುದ ಗಮನಕ್ಕೆ ಬಂದಿದ್ದು, ಈ ಕುರಿತಂತೆ ಈಗಾಗಲೇ ನೇಮಕಾತಿ ಪ್ರಕ್ರಿಯೆ ಮುಕ್ತಯಗೊಳಿಸಿದ್ದು, ಆಯ್ಕೆಯಾಗಿರುವವರಿಗೆ ಕೌನ್ಸಲಿಂಗ್ ಮೂಲಕ ಆದಷ್ಟು ಶೀಘ್ರದಲ್ಲಿ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುವ ಸಾವುಗಳನ್ನು ತಡೆಗಟ್ಟಲು ಈಗಾಗಲೇ ಕೆಲವು ತಾಲೂಕು ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು ಹೃದಯ, ಎದೆ ನೋವಿನ ಕುರಿತಂತೆ ತಾಲೂಕು ಆಸ್ಪತ್ರೆಗಳಲ್ಲಿ ಇಸಿಜಿ ನಡೆಸಿ, ಚಿಕಿತ್ಸೆ ನೀಡಲಾಗುವುದು ಹಾಗೂ ಅಪಘಾತ ಸಂದರ್ಭದಲ್ಲಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವ ಹರೀಶ್ ಸಾಂತ್ವನ ಯೋಜನೆ ಜಾರಿಯಲ್ಲಿದೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದ್ದು ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುವುದು ಮತ್ತು ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರಲಾಗುವುದು. ಕ್ರಿಮ್ಸ್ ನಲ್ಲಿನ ಜಿಲ್ಲಾಸ್ಪತ್ರೆಯನ್ನು ಅಲ್ಲಿಂದ ಬೇರ್ಪಡಿಸುವುದಿಲ್ಲ ಬದಲಾಗಿ ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಮಾಡಲಾಗುವುದು ಎಂದರು.

ಉತ್ತರ ಕನ್ನಡ ಜಿಲ್ಲಾ ನಾಗರೀಕ ಸಂಘ-ಸಂಸ್ಥೆಗಳ ಒಕ್ಕೂಟ ಪ್ರತಿನಿಧಿಗಳು ಜಿಲ್ಲೆಯಲ್ಲಿನ ವೈದ್ಯಕೀಯ ಸಮಸ್ಯೆಗಳ ಬಗ್ಗೆ

ಮಾತನಾಡಿ, ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ, ವೈದ್ಯಕೀಯ ಯಂತ್ರೋಪಕರಣಗಳ ಕೊರತೆಗಳ ಬಗ್ಗೆ ಸಚಿವರಿಗೆ ವಿವರಿಸಿದರು.

ಸಭೆಯಲ್ಲಿ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಹಾಗೂ ಕ್ರಿಮ್ಸ್ ನ ಡೀನ್ ಡಾ.ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net