ಪರಿಶಿಷ್ಟರ ಅನುದಾನ ದುರ್ಬಳಕೆಯಾದರೆ ಕ್ರಮ

16 MDG
Published on

ಮುಂಡರಗಿ: ಪಟ್ಟಣದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ತಾಪಂ ಇಒ ವಿಶ್ವನಾಥ ಹೊಸಮನಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ತಾಲೂಕು ಮಟ್ಟದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಎಸ್ಸಿ, ಎಸ್ಟಿ ಜನರಿಗಾಗಿ ಮಾತ್ರ ಬಳಕೆ ಮಾಡಬೇಕು. ಆ ಅನುದಾನವನ್ನು ಬೇರೆ ಕಡೆ ಬಳಕೆಯಾದ ಬಗ್ಗೆ ದೂರು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಒ ವಿಶ್ವನಾಥ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಎಚ್ಚರಿಸಿದರು. ಹಾಗೆಯೇ ಅನುಮತಿ ಪಡೆಯದೆ ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಅರುಣಾ ಸೋರಗಾಂವಿ ಅವರಿಗೆ ಸೂಚಿಸಿದರು.

ಅತ್ತಿಕಟ್ಟಿ ಗ್ರಾಮದ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಸರ್ಕಾರಿ ಶಾಲೆಯ ಶೌಚಗೃಹ ಕಾಮಗಾರಿ ಪೂರ್ಣಗೊಳಿಸುವಂತೆ ಪಂಚಾಯತ್ ರಾಜ್ ವಿಭಾಗದ ಅಧಿಕಾರಿಗಳಿಗೆ ಇಒ ತಿಳಿಸಿ, ಪ್ರತಿ ಸಭೆಗೆ ಪ್ರಗತಿ ವರದಿ ಕಳಿಸುವಾಗ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಇರುವ ಕಾಮಗಾರಿಗಳ ಬಗ್ಗೆ ಪ್ರಗತಿ ವರದಿ ಸಲ್ಲಿಸುವಂತೆ ಹೇಳಿದರು.

ಕಕ್ಕೂರು ತಾಂಡಾದ ಅಂಗನವಾಡಿ ಕಟ್ಟಡದಲ್ಲಿ ಮೂಲಸೌಕರ್ಯಗಳಾದ ಅಡುಗೆ ಮನೆಯಲ್ಲಿ ಗ್ಯಾಸ್ ಕಟ್ಟೆ, ಮಕ್ಕಳ ಸ್ನೇಹಿ ಶೌಚಗೃಹ, ನೀರಿನ ವ್ಯವಸ್ಥೆ, ಬ್ಲಾಕ್‌ಬೋರ್ಡ್, ಮಕ್ಕಳ ಸ್ನೇಹಿ ಪೇಂಟ್ ಇವುಗಳನ್ನು ಮಾಡಿಸಿಕೊಡುವಂತೆ ಕೆಆರ್‌ಐಡಿಎಲ್ ಅಧಿಕಾರಿಗೆ ವಿಶ್ವನಾಥ ಅವರು ಸೂಚನೆ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ವರದಿ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಅರುಣಾ ಸೋರಗಾಂವಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net