

ಹನೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದರೆ ಕೂಡಲೇ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಇಒ ಉಮೇಶ್ ತಿಳಿಸಿದರು.
ತಾಲೂಕಿನ ಕುರಟ್ಟಿಹೊಸೂರು ಗ್ರಾಮದಲ್ಲಿ ಬುಧವಾರ ತಾಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಸಾರ್ವಜನಿಕರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಪಂ ಕಾರ್ಯನಿರ್ವಹಣಾಧಿಕಾರಿ ಅವರ ಆದೇಶದ ಮೇರೆಗೆ ಪ್ರತಿ ತಿಂಗಳ 2ನೇ ಬುಧವಾರದಂದು ತಾಲೂಕು ವ್ಯಾಪ್ತಿಯಲ್ಲಿ ಗ್ರಾಮವೊಂದರಲ್ಲಿ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗುತ್ತಿದೆ. ಪರಿಹರಿಸಬಹುದಾದ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುವುದು. ಇನ್ನುಳಿದವನ್ನು ಕಾಲಾವಕಾಶ ಆಧಾರದ ಮೇಲೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬಗೆಹರಿಸಲು ಕ್ರಮವಹಿಸಲಾಗುತ್ತದೆ. ಹಾಗಾಗಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಿಗದಿತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಬಳಿಕ ಅಹವಾಲು ಸ್ವೀಕರಿಸುವ ವೇಳೆ 15ಕ್ಕೂ ಹೆಚ್ಚು ಮಹಿಳೆಯರು ಅರ್ಜಿ ಸಲ್ಲಿಸಿದರು. ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬಂದಿಲ್ಲ. ಆದ್ದರಿಂದ ಈ ಬಗ್ಗೆ ಗಮನಹರಿಸಿ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ತಾಪಂ ಇಒ ಉಮೇಶ್ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಇದೇ ವೇಳೆ ವೃದ್ಧಾಪ್ಯ ವೇತನ ಸಮಸ್ಯೆಗೆ ಸಂಬಂಧಿಸಿದಂತೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.
ಇಒ ಉಮೇಶ್ ಮಾತನಾಡಿ, ಸಭೆಯಲ್ಲಿ ಸ್ವೀಕರಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ನಟರಾಜು, ಉಪಾಧ್ಯಕ್ಷ ರಾಜಾರಾಮ್, ತಾಪಂ ಸಹಾಯಕ ನಿರ್ದೇಶಕ ರವೀಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ಪಶು ವೈದ್ಯಾಧಿಕಾರಿ ಡಾ.ಸಿದ್ದರಾಜು, ಕೃಷಿ ಸಹಾಯಕ ನಿರ್ದೇಶಕಿ ಸುಂದರಮ್ಮ, ಸೆಸ್ಕ್ ಜೆಇ ರಂಗಸ್ವಾಮಿ, ಪಿಡಿಒ ಎನ್.ರಂಗರಾಜು, ಆಶಾ, ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.