

ರಾಯಚೂರು: ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ ಎಂದು ಎಸ್‌ಆರ್‌ಕೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಅರುಣಾಕುಮಾರಿ ಹೇಳಿದರು.
ಸ್ಥಳೀಯ ಎಸ್‌ಆರ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಓದುವುದರ ಜತೆಗೆ ಗಾಯನ, ನೃತ್ಯ, ನಾಟಕ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ಅದರಲ್ಲಿ ಪ್ರಬುದ್ಧತೆ ಸಾಸಲು ಪ್ರಯತ್ನಿಸಬೇಕು. ಪಠ್ಯೇತರ ಚಟುವಟಿಕೆಗಳಿಂದ ಪ್ರತಿಭೆಗಳು ಹೊರಬರುವುದರ ಜತೆಗೆ ವಿದ್ಯಾರ್ಥಿಗಳು ಒತ್ತಡದಿಂದ ದೂರವಾಗಲು ಸಾಧ್ಯವಾಗಲಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ ಮಾತನಾಡಿ, ಕೌಶಲ್ಯಾಧರಿತ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಗಾಯಕರಾದ ಚಕ್ರಪಾಣಿ, ಪ್ರತಿಭಾ ಗೋನಾಳ, ಎನ್‌ಎಸ್‌ಎಸ್ ಘಟಕದ ಸಂಚಾಲಕ ಸಂತೋಷ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.