

ಮೈಸೂರು: ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದ್ದು, ದರ್ಶನ್ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ಇನ್ನೂ ನಟ ದರ್ಶನ್ಗೆ ಜಾಮೀನು ದೊರೆತ ವಿಚಾರ ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಸಂಭ್ರಮಿಸುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಖುಷಿಯನ್ನು ಹಂಚಿಕೊಂಡಿದ್ದಾರೆ.
ಇನ್ನೂ ಈ ಬಗ್ಗೆ ನಟ ಪ್ರಕಾಶ್ ರಾಜ್ (Prakash Raj) ಅವರನ್ನು ಪ್ರಶ್ನಿಸಿದಾಗ ನಾನು ಕಳ್ಳ ನನ್ನ ಮಕ್ಕಳ ಬಗ್ಗೆ ಮಾತನಾಡಲು ಬಂದಿಲ್ಲ ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ನಟ ಪ್ರಕಾಶ್ ರಾಜ್ (Prakash Raj) ಅವರು ಮೈಸೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ನಟ ದರ್ಶನ್ ಅವರಿಗೆ ಜಾಮೀನು ಮಂಜೂರಾದ ಬಗ್ಗೆ ಕೇಳಲಾಗಿದೆ ಇದಕ್ಕೆ ಉತ್ತರಿಸಿದ ನಟ ಪ್ರಕಾಶ್ ರಾಜ್, ನಾನು ಸಿನಿಮಾ ಹಾಗೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ ನಾನು ನನ್ನ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ. ಕಳ್ ನನ್ ಮಕ್ಕಳ ಬಗ್ಗೆ ಮಾತನಾಡಲು ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಬೆನ್ನು ನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಅವರಿಗೆ ಇನ್ನಷ್ಟೇ ಶಸ್ತ್ರಚಿಕಿತ್ಸೆ ಮಾಡಬೇಕಿದೆ. ಇನ್ನೂ ನೆಚ್ಚಿನ ನಟನಿಗೆ ಹನುಮ ಜಯಂತಿಯಂದೇ ಜಾಮೀನು ಸಿಕ್ಕಿರುವ ವಿಚಾರ ತಿಳಿದು ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲುಮುಟ್ಟಿದ್ದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.