

ಮಂಗಳೂರು : ಶಾಲಾ ಕಾಲೇಜುಗಳ 100 ಮೀಟರ್ ಅಂತರದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಂಡು ಅಂಗಡಿ ಪರವಾನಗಿ ರದ್ದುಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ‘ ಹೊಸ ತಂಬಾಕು ಪರವಾನಿಗೆ ನೀತಿಯು ಮಹಾನಗರ ಪಾಲಿಕೆಯಲ್ಲಿ ಜಾರಿಯಾದ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇತರ ಸ್ಥಳಗಳಲ್ಲಿ ತಂಬಾಕು ಮಾರಾಟ ಮಾಡುವವರು ಕಡ್ಡಾಯವಾಗಿ ಪಾಲಿಕೆಯಿಂದ ಪರವಾನಗಿ ಪಡೆಯಬೇಕು. ಪ್ರತಿ ತಿಂಗಳ ವರದಿಯನ್ನು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಬೇಕೆಂದು ಅವರು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಮಿಕರಲ್ಲಿ ತಂಬಾಕು ಸೇವನೆಯು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ವೆನ್ಲಾಕ್ ಆಸ್ಪತ್ರೆಯ ಸಹಭಾಗಿತ್ವದೊಂದಿಗೆ ಕಾರ್ಮಿಕರ ಕಾಲನಿಗಳಿಗೆ ತೆರಳಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಆಹಾರ ಸುರಕ್ಷತೆ ಗುಣಮಟ್ಟ ಅಂಕಿತ ಅಧಿಕಾರಿ ಪ್ರವೀಣ್ ಮಾತನಾಡಿ ರಾಜ್ಯ ಸರ್ಕಾರದಿಂದ ಆಹಾರಗಳಲ್ಲಿ ಕೃತಕ ಬಣ್ಣವನ್ನು ಬಳಸುವುದನ್ನು ನಿಷೇಧಿಸಲಾಗಿದೆ. ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಆಹಾರ ಘಟಕಗಳಲ್ಲಿ ಕೃತಕ ಬಣ್ಣಗಳನ್ನು ಬಳಸುತ್ತಿದ್ದಲ್ಲಿ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ಆರ್ .ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಡಿವೈಎಸ್‌ಪಿ ಮಂಜುನಾಥ್ ಉಪಸ್ಥಿತರಿದ್ದರು.