

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2024ನೇ ವರ್ಷದ 4ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧರವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ಹಾಗೂ ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಲು ತಿಳಿಸಿದರು.
8.75 ಲಕ್ಷ ರೂ.ಪರಿಹಾರ: ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅಮರೇಶ್ ಅವರಿಗೆ 2024ರ ಅಕ್ಟೋಬರ್ 1 ರಿಂದ 2024ರ ಡಿಸೆಂಬರ್ 18 ವರೆಗೆ 28 ಜನ ಸಂತ್ರಸ್ತರಿಗೆ 8.75 ಲಕ್ಷ ರೂ. ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
48 ದೌರ್ಜನ್ಯ ಪ್ರಕರಣ ದಾಖಲು: ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 48 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ, ಎಲ್ಲ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸುವ ಚಾರ್ಜ್‌ಶೀಟ್ ಅನ್ನು ಕಾಲಾವಧಿಯಲ್ಲೇ ಸಲ್ಲಿಸುವ ಜತೆಗೆ ಯಾವುದೇ ಚಾಜ್‌ಶೀಟ್ ಬಾಕಿ ಉಳಿಸಿಕೊಳ್ಳದಂತೆ ಪೊಲೀಸ್ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಸೂಚಿಸಿದರು. ದೌರ್ಜನ್ಯ ಪ್ರಕರಣಗಳು ಹಾಗೂ ಗಲಭೆ ನಡೆಯುವುದು, ಗುಂಪು ಗಲಭೆಗಳು ಹೆಚ್ಚಾಗಿ ಕಂಡುಬಂದ ಗ್ರಾಮ ಅಥವಾ ಪ್ರದೇಶಗಳನ್ನು ಗುರುತಿಸಿ ಸಂಬಂಧಪಟ್ಟ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲು ಎಡಿಸಿ ನಿರ್ದೇಶನ ನೀಡಿದರು.
ತಡೆಗೆ ಕ್ರಮವಹಿಸಬೇಕು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಜಿಲ್ಲೆಯ ಪ್ರತಿ ಗ್ರಾಮಪಂಚಾಯಿತಿ ಮಟ್ಟದಿಂದಲೂ ಜನರಲ್ಲಿ ಅರಿವು ಮೂಡಿಸಬೇಕು, ಈ ಕಾಯ್ದೆ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಮಾಹಿತಿ ನೀಡಿ ಜನರನ್ನು ಜಾಗೃತಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು. ಆಯಾ ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಈ ಕುರಿತು ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ ಸಭೆಯಲ್ಲಿ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ದೌರ್ಜನ್ಯ ಪ್ರಕರಣಗಳ ತೀವ್ರ ವಿಲೇವಾರಿ ಜತೆಗೆ ಪ್ರಕರಣ ಸಂಬಂಧ ಪರಿಹಾರ ಧನ ಮಂಜೂರಾಗಿ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು. ಮುಖ್ಯವಾಗಿ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ಇಂಥ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಸೂಚನೆ ನೀಡಿದರು.