ಸೆ.14, 15ರಂದು ನಗರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾಹಿತಿ

Adc Meeting Mandya
Published on

ಮಂಡ್ಯ: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗೆ ನಗರದಲ್ಲಿ ಸೆ.14 ಮತ್ತು 15 ರಂದು ಕನ್ನಡ ಭಾಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಆದ್ದರಿಂದ ಪಾರದರ್ಶಕ, ನ್ಯಾಯಸಮ್ಮತವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ನಡೆಸಲು 6 ಕೇಂದ್ರವನ್ನು ಗುರುತಿಸಲಾಗಿದೆ. 14ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಇದಕ್ಕೆ ಏಳು ಜನ ಅಂಗವಿಕಲರು ಸೇರಿದಂತೆ 4,545 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ ಎಂದರು.

15ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಗೆ 9 ಅಂಗವಿಕಲರು ಸೇರಿದಂತೆ 7,065 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಮಧ್ಯಾಹ್ನ 2 ರಿಂದ 4 ರವರೆಗೆ ನಿರ್ದಿಷ್ಟ ಪತ್ರಿಕೆ-2ಕ್ಕೆ 9 ಅಂಗವಿಕಲರು ಸೇರಿದಂತೆ 6,641 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ. ಪರೀಕ್ಷೆ ನಡೆಯುವ ದಿನ ಕೇಂದ್ರದ ಸುತ್ತಲೂ 200 ಮೀ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಸೂಚಿಸಿದರು.

ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಮೊಬೈಲ್ ಫೋನ್, ಬ್ಲೂಟೂಥ್, ವೈಟ್ ಫ್ಲೂಯಿಡ್, ವೈರ್‌ಲೆಸ್ ಸೆಟ್ಸ್, ಕ್ಯಾಲ್ಕುಲೇಟರ್ ತರುವುದನ್ನು ನಿಷೇಧಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಒಬ್ಬರು ವೈದ್ಯರು/ ಆರೋಗ್ಯ ಸಿಬ್ಬಂದಿ ನೇಮಕ ಮಾಡಬೇಕು. ಕೇಂದ್ರದ ಸುತ್ತಮುತ್ತ ಸ್ವಚ್ಛತೆ ಮತ್ತು ಅಭ್ಯರ್ಥಿಗಳಿಗೆ ಮೂಲ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಹೇಳಿದರು.

ಕೊಠಡಿ ಮೇಲ್ವಿಚಾರಕರು ಅಭ್ಯರ್ಥಿಗಳ ಚಲನವಲನಗಳನ್ನು ಆಗಿಂದಾಗ್ಗೆ ಸೂಕ್ಷ್ಮವಾಗಿ ಗಮನಿಸಿ. ಯಾವುದೇ ಅಭ್ಯರ್ಥಿ ಸಂಶಯಾತ್ಮಕವಾಗಿ ವರ್ತಿಸುತ್ತಿದ್ದಲ್ಲಿ ತಕ್ಷಣ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ನಿರೀಕ್ಷಣಾಧಿಕಾರಿ ಗಮನಕ್ಕೆ ತಂದು ಸೂಕ್ತ ಕ್ರಮವಹಿಸಿ. ಪರೀಕ್ಷಾ ಕೊಠಡಿಗಳಲ್ಲಿನ ಸಿ.ಸಿ ಟಿವಿ ಮತ್ತು ಬಾಡಿ ಕ್ಯಾಮೆರಾಗಳು ಪರೀಕ್ಷಾ ಪ್ರಕ್ರಿಯೆ ಜತೆಗೆ ಎಲ್ಲ ಅಭ್ಯರ್ಥಿ, ವೀಕ್ಷಕರ ಚಲನ ವಲನವನ್ನು ಸ್ಪಷ್ಟವಾಗಿ ಸೆರೆಹಿಡಿಯುವಂತೆ ಅಳವಡಿಸುವ ಸಲುವಾಗಿ ಸೂಕ್ತ ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕೃಷಿ ಇಲಾಖೆಯ ಉಪ ನಿರ್ದೇಶಕಿ ಮಾಲತಿ, ಬಿಇಒ ಮಹಾದೇವು, ಚಂದ್ರಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net