ಅ.2ರಂದು ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹೇಳಿಕೆ

Adc Meeting Mandya
Published on

ಮಂಡ್ಯ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಉದ್ಯಾನದಲ್ಲಿ ಅ.2ರಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನೆಹರು ಯುವ ಕೇಂದ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ ಅಂದು ಬೆಳಗ್ಗೆ 9.30ಕ್ಕೆ ಮಹಾತ್ಮ ಗಾಂಧೀಜಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಬಳಿಕ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಗುವುದು. ವಿವಿಧ ಧರ್ಮಗಳ ಗುರುಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಸರ್ವಧರ್ಮ ಪ್ರಾರ್ಥನೆ ನಡೆಸಬೇಕು. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಅಧಿಕಾರಿಗಳು, ಗಣ್ಯರು ಹಾಗೂ ಮಕ್ಕಳಿಗೆ ಮಹಾತ್ಮ ಗಾಂಧೀಜಿ ಅವರ ಜೀವನದ ಬಗ್ಗೆ ತಿಳಿದು ಕೊಳ್ಳಲು ಹಾಗೂ ಅವರ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಅನುಕೂಲವಾಗುವಂತೆ ಜೀವನ ಚರಿತ್ರೆಯ ಬಗ್ಗೆ ವಿವಿಧ ಪುಸ್ತಕಗಳನ್ನು ನೀಡಬೇಕು. ಅಂತೆಯೇ ತೋಟಗಾರಿಕೆ ಇಲಾಖೆ ವತಿಯಿಂದ ಸೀಬೆ, ನಿಂಬೆ, ತೆಂಗಿನ ಸಸಿಗಳನ್ನು ಗಣ್ಯರಿಗೆ ಹಾಗೂ ಭಜನೆಯನ್ನು ಸಾದರ ಪಡಿಸುವ ಮಕ್ಕಳಿಗೆ ವಿತರಿಸಬೇಕು. ದಾನಗಳಲ್ಲಿ ಶ್ರೇಷ್ಟ ದಾನ ರಕ್ತದಾನ ಎನ್ನುತ್ತಾರೆ. ಆದ್ದರಿಂದ ಅಂದು ರಕ್ತದಾನ ಶಿಬಿರವನ್ನು ಆಯೋಜಿಸಬೇಕು. ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ರಕ್ತದಾನ ಮಾಡುವಂತೆ ಮನವಿ ಮಾಡಿದರು.

ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಮಾತನಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮ ಗಾಂಧೀಜಿ ಕುರಿತು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ, ನೆಹರು ಯುವ ಕೇಂದ್ರದ ಮುಖ್ಯಲೆಕ್ಕಾಧಿಕಾರಿ ರವಿಚಂದ್ರನ್, ನಗರಸಭೆಯ ಪರಿಸರ ಇಂಜಿನಿಯರ್ ರುದ್ರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಯಪ್ರಕಾಶ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net