

ಮಂಡ್ಯ: ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಜಿಲ್ಲೆಯ ಪ್ರವಾಸ ಕಾರ್ಯಕ್ರಮದ ವೇಳಾಪಟ್ಟಿ ಪರಿಷ್ಕರಿಸಲಾಗಿದೆ. ಅದರಂತೆ ಮೇ 26ರಿಂದ 29 ರವರೆಗೆ ಜಿಲ್ಲೆಯಲ್ಲಿ ವಾಸ್ತವ್ಯವಿರಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ 28ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ. ಈ ಕುರಿತು ವ್ಯಾಪಕ ಪ್ರಚಾರವಾಗಬೇಕು. ಗ್ರಾಮ ಪಂಚಾಯಿತಿ ಪಿಡಿಒಗಳು, ಉಪಲೋಕಾಯುಕ್ತರು ಆಗಮಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಬ್ಯಾನರ್‌ಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು.
ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರ ದೂರು ಸ್ವೀಕಾರ ಕಾರ್ಯಕ್ರಮ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ತನಿಖೆಗೆ ಬಾಕಿ ಇರುವ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಸಾರ್ವಜನಿಕರಿಂದ ದೂರು ಸಹ ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ಆದ್ದರಿಂದ ಅಂದು ಸಾರ್ವಜನಿಕರಿಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್, ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಸಿದ್ದಲಿಂಗೇಶ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.