ಅಧಿಕಾರಿಗಳಿಗೆ ಶಿಷ್ಟಾಚಾರದ ಪಾಠ: ನಿಯಮ ಉಲ್ಲಂಘಿಸದಂತೆ ಕಟ್ಟುನಿಟ್ಟಿನ ಸೂಚನೆ

21_09_Mdy_02(Adc Meeting)
Published on

ಮಂಡ್ಯ: ಜಿಲ್ಲೆಯಲ್ಲಿ ನಡೆಯುವ ಸರ್ಕಾರಿ ಸಭೆ ಹಾಗೂ ಸಮಾರಂಭಗಳಿಗೆ ಸರ್ಕಾರದ ನಿರ್ದೇಶನದಂತೆ ಸಚಿವರು, ಶಾಸಕರು, ಜನಪ್ರತಿನಿಧಿಗಳನ್ನು ಆಹ್ವಾನಿಸುವ ಮೂಲಕ ಕಟ್ಟುನಿಟ್ಟಾಗಿ ಶಿಷ್ಟಾಚಾರ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿಡಿಯೋ ಕಾನ್ಪರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳನ್ನು ಮುದ್ರಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಶಿಷ್ಟಾಚಾರ ಪಾಲಿಸಬೇಕು. ಈ ಬಗ್ಗೆ ಗೊಂದಲಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕು ಎಂದರು.

ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಸೇರಿದಂತೆ ಇನ್ನಿತರ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳನ್ನು ಅಧಿಕಾರಿಗಳು ಜನಪ್ರತಿನಿಧಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಕಾರ್ಯಕ್ರಮದ ವೇದಿಕೆಯಲ್ಲಿ ಆಸನದ ವ್ಯವಸ್ಥೆ ಮಾಡಬೇಕು. ಸರ್ಕಾರದ ಅನುದಾನ ಪಡೆದು ಸ್ವಯಂ ಸೇವಾ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಯಾವುದೇ ನಿರ್ಮಾಣ ಕಾಮಗಾರಿ, ಕಾರ್ಯಕ್ರಮ ನಡೆಸಿದರೂ ಸಹ ಆಯಾ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಣ ಹಾಗೂ ಆಹ್ವಾನದಲ್ಲಿ ಶಿಷ್ಟಾಚಾರ ಪಾಲಿಸಬೇಕು ಎಂದರು.

ಶಿಷ್ಟಾಚಾರ ಪಾಲನೆ ಕುರಿತಂತೆ ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ಸುತ್ತೋಲೆಗಳನ್ನು ಪಾಲಿಸಬೇಕು. ಸಚಿವರು ಹಾಗೂ ಶಾಸಕರನ್ನು ಖುದ್ದು ಸಂಪರ್ಕಿಸಿ ಆಹ್ವಾನ ಪತ್ರಿಕೆಗಳನ್ನು ತಲುಪಿಸಬೇಕು. ಒಂದು ವೇಳೆ ಖುದ್ದು ಆಹ್ವಾನಿಸಲು ಸಾಧ್ಯವಾಗದಿದ್ದಲ್ಲಿ ಕರೆ ಮಾಡಿ ಅವರಿಗೆ ಕಾರ್ಯಕ್ರಮದ ಮಾಹಿತಿ ನೀಡಿ ಆಹ್ವಾನಿಸಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಆರ್.ಐಶ್ವರ್ಯಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ಸ್ವಾಮಿಗೌಡ, ಹಿಂದುಳಿದ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net